ADVERTISEMENT

ಪೊಲೀಸ್ ಇಲಾಖೆಗೆ 206 ವೈಜ್ಞಾನಿಕ ಅಧಿಕಾರಿಗಳ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 8:32 IST
Last Updated 13 ಜುಲೈ 2021, 8:32 IST
ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರ ಸಾಂದರ್ಭಿಕ ಚಿತ್ರ
ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರ ಸಾಂದರ್ಭಿಕ ಚಿತ್ರ   

ಬೆಂಗಳೂರು:ಅಪರಾಧ ಕೃತ್ಯಗಳು ನಡೆದ ಸ್ಥಳಗಳಲ್ಲಿ ವೈಜ್ಞಾನಿಕವಾಗಿ ಸಾಕ್ಷ್ಯ ಸಂಗ್ರಹಿಸುವುದಕ್ಕಾಗಿ ನೇಮಕಗೊಂಡಿರುವ 206 ವೈಜ್ಞಾನಿಕ ಅಧಿಕಾರಿಗಳು ರಾಜ್ಯ ಪೊಲೀಸ್ ಇಲಾಖೆಗೆ ಮಂಗಳವಾರ ಸೇರ್ಪಡೆಯಾದರು.

ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 206 ವೈಜ್ಞಾನಿಕ ಅಧಿಕಾರಿಗಳ ನೇಮಕಾತಿ ಆದೇಶವನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಹಸ್ತಾಂತರಿಸಿದರು. ಎಲ್ಲರನ್ನೂ ಸಮಾರಂಭದಲ್ಲೇ ಇಲಾಖೆಗೆ ಬರ ಮಾಡಿಕೊಳ್ಳಲಾಯಿತು‌

ಬಳಿಕ ಮಾತನಾಡಿದ ಯಡಿಯೂರಪ್ಪ, 'ಅಪರಾಧ ಪ್ರಕರಣಗಳ ತನಿಖೆಯಲ್ಲಿ ವೈಜ್ಞಾನಿಕ ವಿಧಾನದ ಮೂಲಕ ಸ್ಥಳ ತನಿಖೆ ನಡೆಸುವುದಕ್ಕಾಗಿ ಈ ಅಧಿಕಾರಿಗಳನ್ನು ನೇಮಿಸಲಾಗಿದೆ. 206 ಜನರಿಗೂ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ತರಬೇತಿ ನೀಡಲಾಗಿದೆ. ಎಲ್ಲ ಜಿಲ್ಲೆಗಳಿಗೂ ಈ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುವುದು' ಎಂದರು.

ADVERTISEMENT

ಪೊಲೀಸ್ ಇಲಾಖೆಯ ಬಲವರ್ಧನೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. 100 ಪೊಲೀಸ್ ಠಾಣೆಗಳಿಗೆ ಮುಂದಿನ ಐದು ವರ್ಷಗಳಲ್ಲಿ ಸ್ವಂತ ಕಟ್ಟಡ ನಿರ್ಮಿಸಲಾಗುವುದು. ಹುಬ್ಬಳ್ಳಿ ಮತ್ತು ಬಳ್ಳಾರಿಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದ ಪ್ರಾದೇಶಿಕ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಕರಾವಳಿ ಕಾವಲು ಪಡೆಯ ಬಲವರ್ಧನೆ ಮಾಡಲಾಗುವುದು ಎಂದು ತಿಳಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ನಾತನಾಡಿ, 'ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಲಹೆಯಂತೆ ವೈಜ್ಞಾನಿಕ ಅಧಿಕಾರಿಗಳನ್ನು ನೇಮಿಸಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಈ ಪ್ರಕ್ರಿಯೆ ಆರಂಭವಾಗಿದೆ' ಎಂದರು.

ಪರಿಷ್ಕೃತ ಆರೋಗ್ಯ ಭಾಗ್ಯ ಯೋಜನೆ, ಪೊಲೀಸ್ ಕಲ್ಯಾಣ ನಿಧಿ ಮತ್ತು ವಿದ್ಯಾ ನಿಧಿ ಯೋಜನೆಗಳಿಗೆ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಯಿತು. ವಿವಿಧ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಗಳಿಗೆ ಮಂಜೂರಾಗಿರುವ 50 ಬಸ್ ಗಳ ಹಸ್ತಾಂತರವೂ ನಡೆಯಿತು.

ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರತಾಪ್ ರೆಡ್ಡಿ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.