ADVERTISEMENT

ಸಿದ್ದರಾಮಯ್ಯ ರಾಜೀನಾಮೆ ಕೊಡಲಿ: ರವಿಕುಮಾರ್

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2022, 20:47 IST
Last Updated 19 ನವೆಂಬರ್ 2022, 20:47 IST
ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ನೀಡಿದ ಎನ್.ರವಿಕುಮಾರ್‌, ಎಲ್.ಎ.ರವಿಸುಬ್ರಹ್ಮಣ್ಯ ಹಾಗೂ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗ
ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ನೀಡಿದ ಎನ್.ರವಿಕುಮಾರ್‌, ಎಲ್.ಎ.ರವಿಸುಬ್ರಹ್ಮಣ್ಯ ಹಾಗೂ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗ   

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಸುಳ್ಳು ಹೇಳುತ್ತಿರುವ ಸಿದ್ದರಾಮಯ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಮುಖ್ಯ ಚುನಾವಣಾಧಿಕಾರಿಯವರನ್ನು ಭೇಟಿಮಾಡಿ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌, ‘2017ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೇ ಚಿಲುಮೆ ಸಂಸ್ಥೆಗೆ ಮತದಾರರ ಜಾಗೃತಿ ಕಾರ್ಯಕ್ರಮ ನಡೆಸಲು ಅನುಮತಿ ನೀಡಲಾಗಿತ್ತು. ಈಗ ಬಿಜೆಪಿ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದರು.

‘ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಅವರಿಗೂ ಸತ್ಯಕ್ಕೂ ಬಹುದೂರ. ಅವರ ಮುಖಕ್ಕೆ ರಾಚುವಂತೆ ದಾಖಲೆ ನೀಡಿದ್ದೇವೆ. ಸಿದ್ದರಾಮಯ್ಯ ತಕ್ಷಣವೇ ರಾಜೀನಾಮೆ ನೀಡಬೇಕು. ಇಲ್ಲವಾದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತೇವೆ’ ಎಂದು ಹೇಳಿದರು.

ADVERTISEMENT

ಪರಿಷ್ಕರಣೆಯಲ್ಲಿ 6.73 ಲಕ್ಷ ಮತದಾರರ ಹೆಸರನ್ನು ಮಾತ್ರ ಕೈಬಿಡಲಾಗಿದೆ. 24 ಲಕ್ಷ ಮತದಾರರನ್ನು ಕೈಬಿಡಲಾಗಿದೆ ಎಂದುಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಬೆಂಗಳೂರಿನಲ್ಲಿ ಇರುವ ಮತದಾರರ ಸಂಖ್ಯೆಯೇ 90 ಲಕ್ಷ. ಹೀಗಿರುವಾಗ, ಅಷ್ಟು ಬೃಹತ್ ಪ್ರಮಾಣದಲ್ಲಿ ಮತದಾರರನ್ನು ಪಟ್ಟಿಯಿಂದ ಕೈಬಿಡಲು ಸಾಧ್ಯವೇ? ಇವರು ನೀಡುತ್ತಿರುವ ಅಂಕಿ–ಸಂಖ್ಯೆಗೆ ತಾಳಮೇಳವೇ ಇಲ್ಲ ಎಂದು ವ್ಯಂಗ್ಯವಾಡಿದರು.

ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಹೆಸರು ಕೇಳಿದರೆ ಕಾಂಗ್ರೆಸ್‌ ನಾಯಕರು ಕಂಗಾಲಾಗುತ್ತಾರೆ. ರಾಜಕೀಯವಾಗಿ ನೆಲೆ ಕಳೆದುಕೊಳ್ಳುವ ಭೀತಿಯಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್‌ ರಾಜಕೀಯ ನಿವೃತ್ತಿ ಪಡೆಯಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.