ಬಿ.ವೈ ವಿಜಯೇಂದ್ರ ಮತ್ತು ಬಸನಗೌಡ ಪಾಟೀಲ ಯತ್ನಾಳ
ಬೆಂಗಳೂರು: ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಹಾಗೂ ಆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಮರ ಸಾರಿ ನಿರಂತರ ಟೀಕಾಪ್ರಹಾರ ನಡೆಸಿದ್ದ ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳಿಗೆ ಉಚ್ಚಾಟನೆ ಮಾಡಲಾಗಿದೆ.
ಪಕ್ಷದಿಂದ ಉಚ್ಚಾಟನೆ ಮಾಡಿರುವ ಕುರಿತು ‘ಎಕ್ಸ್’ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಯತ್ನಾಳ, ರಾಜ್ಯ ಬಿಜೆಪಿಯೊಳಗಿನ ಕುಟುಂಬ ರಾಜಕಾರಣ, ಹೊಂದಾಣಿಕೆ ರಾಜಕಾರಣದ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ.
‘ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ನ ಹರಿಕಾರರಿಂದ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲಬುರಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ’ ಎಂದು ಯತ್ನಾಳ ಕಿಡಿಕಾರಿದ್ದಾರೆ.
‘ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ. ಪಕ್ಷದ ವಿರುದ್ದ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರನ್ನು ಉಚ್ಚಾಟನೆ ಮಾಡದೆ ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನನ್ನು ಉಚ್ಚಾಟನೆ ಮಾಡಿರುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ’ ಎಂದು ಟೀಕಿಸಿದ್ದಾರೆ.
‘ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು, ಯಾರ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ನಿಂದ ಎಂಬುದನ್ನು ಪಕ್ಷದ ಹೈಕಮಾಂಡ್ ವಿಶ್ಲೇಷಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.
‘ಬಿ.ಬಿ.ಶಿವಪ್ಪ, ಮಲ್ಲಿಕಾರ್ಜುನಪ್ಪ, ಡಾ ವಿ.ಎಸ್.ಆಚಾರ್ಯರು ಸೇರಿದಂತೆ ಪಕ್ಷದ ಅನೇಕ ಧುರೀಣರು, ಸಾವಿರಾರು ಕಾರ್ಯಕರ್ತರು ಪಕ್ಷವನ್ನು ಸಂಘಟಿಸಿದ ಪರಿಣಾಮದಿಂದಲೇ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದ್ದು. ಬಿಡಿಗಾಸಿಲ್ಲದೇ, ಕಾರ್ಯಕರ್ತರ ಓಡಾಟ, ಉಪಹಾರಕ್ಕೂ ಹಣವಿಲ್ಲದಿರುವ ಕಾಲಘಟ್ಟದಲ್ಲಿ ದಿವಂಗತ ಮಲ್ಲಿಕಾರ್ಜುನಪ್ಪನವರು ತಮ್ಮ ಸ್ವಂತ ಸಂಪನ್ಮೂಲದಿಂದ ಪಕ್ಷವನ್ನು ಮುನ್ನೆಡೆಸಿ ಕಾರ್ಯಕರ್ತರ ಮನೋಬಲವನ್ನು ಹೆಚ್ಚಿಸಿ ಸಂಘಟನೆಗೆ ಕಾರಣವಾಗಿದ್ದರು. ಡಾ. ವಿ.ಎಸ್.ಆಚಾರ್ಯ ಅವರು ಮಾತು ಕಡಿಮೆಯಾದರೂ ತಮ್ಮ ಕೆಲಸದಿಂದ ಕರಾವಳಿಯಲ್ಲಿ ಪಕ್ಷವನ್ನು ಸಂಘಟಿಸಿದ್ದನ್ನು ಪಕ್ಷ ಮರೆಯಬಾರದು. ಆಯಕಟ್ಟಿನ ಸ್ಥಾನದಲ್ಲಿದ್ದರೂ ಆಚಾರ್ಯರ ಕುಟುಂಬದವರು ಯಾರೂ ಸಹ ರಾಜಕಾರಣಕ್ಕೆ ಬರಲಿಲ್ಲ ಎಂಬುದು ಹಲವರಿಗೆ ಗೊತ್ತಿಲ್ಲ’ ಎಂದು ಯತ್ನಾಳ ತಿಳಿಸಿದ್ದಾರೆ.
ಹಿಂದುತ್ವವಾದದ ಬಗ್ಗೆ ರಾಜಿ ಮಾಡಿಕೊಳ್ಳದೆ, ಕುಟುಂಬ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದ ಈಶ್ವರಪ್ಪನವರನ್ನು ಹೊರಗಿಟ್ಟರು. ನಿಸ್ವಾರ್ಥ ಕಾರ್ಯಕರ್ತರು, ತನು-ಮನ-ಧನದಿಂದ ದುಡಿದ ಮುಖಂಡರಿಂದ ಪಕ್ಷದ ಸಂಘಟನೆಯಾಯಿತೇ ಹೊರತು ಸ್ವಯಂಘೋಷಿತ ‘ಪೂಜ್ಯ’ರಿಂದಲ್ಲ ಎಂದು ಯತ್ನಾಳ ಗುಡುಗಿದ್ದಾರೆ.
ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ವಕ್ಫ್ ಹೋರಾಟಕ್ಕೆ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದು ನಾವೇ. ವಾಲ್ಮೀಕಿ ಹಗರಣ, ದಲಿತರ ಅನುದಾನದ ದುರ್ಬಳಕೆಯನ್ನು ಖಂಡಿಸಿ ಹೋರಾಟ ರೂಪಿಸಿದ್ದೆವು. ವಕ್ಫ್ ವಿರುದ್ಧ ನಾವು ಮಾಡಿದ್ದ ಮಾಹಿತಿ ಸಂಗ್ರಹಕ್ಕೆ ಜೆಪಿಸಿ ಅಧ್ಯಕ್ಷರಾದ ಜಗದಂಬಿಕಾ ಪಾಲ್ ಅವರು ಪ್ರಶಂಸಿಸಿದ್ದರು ಎಂದು ಯತ್ನಾಳ ಉಲ್ಲೇಖಿಸಿದ್ದಾರೆ.
ಪ್ರತಿಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆ, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದೇನೆ. ಕರ್ನಾಟಕ ಲೋಕಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದೇನೆ. ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ. ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳು ಸೂಚಿಸಿದಕ್ಕೆ ನಮ್ಮ ನಿಲುವು ಕೆಲವರಿಗೆ ‘ಅಪಥ್ಯ’ವಾಗಿದೆ ಎಂದು ಕುಟುಕಿದ್ದಾರೆ.
‘ಅಡ್ಜಸ್ಟ್ಮೆಂಟ್ ರಾಜಕಾರಣ ನಿಲ್ಲದಿದ್ದರೆ ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು. ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ’ ಎಂದೂ ಆಕ್ರೋಶ ಹೊರಹಾಕಿದ್ದಾರೆ.
‘Nation First, Party Next, Self Last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಯತ್ನಾಳ ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.