ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ, ಕೆ.ಎಚ್.ಮುನಿಯಪ್ಪ, ಎನ್.ಚಲುವರಾಯಸ್ವಾಮಿಇದ್ದಾರೆ.
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮುಗಿದ ಬೆನ್ನಲ್ಲೇ ಮುನ್ನೆಲೆಗೆ ಬಂದಿದ್ದ ಸಂಪುಟ ಪುನರ್‌ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ, ನಂತರ ಸ್ವಲ್ಪ ದಿನಗಳು ತಣ್ಣಗಾಗಿದ್ದವು. ಈಗ ಮತ್ತೆ ಚರ್ಚೆಗಳು ಆರಂಭವಾಗಿವೆ.
ಹೊಸ ವರ್ಷದ ಮೊದಲ ದಿನ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ನಾಯಕರು, ಹೈಕಮಾಂಡ್ ಜತೆ ಚರ್ಚಿಸಿದ ನಂತರ ಮುಂದಿನ ದಿನಗಳಲ್ಲಿ ಸಂಪುಟ ಪುನರ್‌ರಚನೆ ಮಾಡಲಾಗುವುದು ಎಂದರು.
ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವಕ್ಕೆ ಆಹ್ವಾನ ನೀಡಲು ಕಳೆದ ತಿಂಗಳು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಬಳಿಕ ‘ಸಚಿವ ಸಂಪುಟ ಪುನರ್ ರಚನೆ ಸದ್ಯಕ್ಕಿಲ್ಲ’ ಎಂದು ಸ್ಪಷ್ಟಪಡಿಸಿದ್ದರು.
‘ಸಂಪುಟ ಪುನರ್ ರಚನೆ ಕುರಿತು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ, ಈಗಲೇ ಅಲ್ಲ’ ಎಂದು ಸಿದ್ದರಾಮಯ್ಯ ಹೇಳಿದ್ದರು.
ಒಬ್ಬರಿಗೆ ಒಂದೇ ಹುದ್ದೆ: ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ದೆಹಲಿ ಹಂತದಲ್ಲಿ ನಿರ್ಧಾರವಾಗಬೇಕು. ಒಬ್ಬರು ಒಂದೇ ಹುದ್ದೆಯಲ್ಲಿರಬೇಕು ಎನ್ನುವುದು ನನ್ನ ಅಭಿಪ್ರಾಯ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.