ಬೆಂಗಳೂರು: ತಾಂತ್ರಿಕ ಸಮಿತಿಯು ನೀಡಿದ ವರದಿ ಆಧಾರದ ಮೇಲೆ ತುಮಕೂರಿನಲ್ಲಿ ಹೇಮಾವತಿ ಎಕ್ಸ್‌ಪ್ರೆಸ್ ನಾಲೆ ಕಾಮಗಾರಿಯನ್ನು ಆರಂಭಿಸಲಾಗಿದೆ. ಬಿಜೆಪಿಯು ರಾಜಕೀಯ ಕಾರಣಗಳಿಗಾಗಿ ವಿರೋಧ ಮಾಡುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ₹1,500 ಕೋಟಿ ವೆಚ್ಚದಲ್ಲಿ ನಾಲೆ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ. ಕೆಲಸ ಆರಂಭವಾಗುತ್ತಿದ್ದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ವಿರೋಧ ಮಾಡುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ದೂರಿದರು.
ಹೇಮಾವತಿ ಎಕ್ಸ್‌ಪ್ರೆಸ್ ನಾಲೆ ಕಾಮಗಾರಿ ಅನುಷ್ಠಾನಕ್ಕೆ ಜಲ ಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹಲವು ಸಭೆಗಳನ್ನು ನಡೆಸಲಾಗಿತ್ತು. ಆ ಭಾಗದ ಸಂಸದರು, ಶಾಸಕರು ಭಾಗವಹಿಸಿದ್ದರು. ತಾಂತ್ರಿಕ ಸಮಿತಿ ರಚಿಸಲು ಒತ್ತಾಯಿಸಿದ್ದರು. ಸಮಿತಿ ಕಾಮಗಾರಿ ಕೈಗೊಳ್ಳಲು ಸಮ್ಮತಿ ನೀಡಿದ ನಂತರವೇ ಕಾಮಗಾರಿ ಆರಂಭಿಸಲಾಗಿದೆ. ಪ್ರಸ್ತಾವವನ್ನು ಸಮಿತಿ ತಿರಸ್ಕರಿಸಿದ್ದರೆ ಯೋಜನೆಯನ್ನೇ ರದ್ದು ಮಾಡುತ್ತಿದ್ದೆವು. ಈ ಎಲ್ಲ ವಿಷಯ ಗೊತ್ತಿದ್ದರೂ ಬಿಜೆಪಿ ಏಕೆ ವಿರೋಧ ಮಾಡುತ್ತಿದೆ ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.