ADVERTISEMENT

ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಲು ಸರ್ಕಾರಕ್ಕೆ ಸಲಹೆ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಮಾರ್ಚ್ 2022, 10:44 IST
Last Updated 31 ಮಾರ್ಚ್ 2022, 10:44 IST
ಸಿದ್ದರಾಮಯ್ಯ ಮತ್ತು ಬಸವರಾಜ ಬೊಮ್ಮಾಯಿ (ಟ್ವಿಟರ್ ಚಿತ್ರ)
ಸಿದ್ದರಾಮಯ್ಯ ಮತ್ತು ಬಸವರಾಜ ಬೊಮ್ಮಾಯಿ (ಟ್ವಿಟರ್ ಚಿತ್ರ)   

ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ಅಗತ್ಯ ಸಲಹೆ ನೀಡಿದ್ದೇನೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೀಸಲಾತಿ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆಯಲ್ಲಿ ಭಾಗವಹಿಸಿ, ಸರ್ಕಾರಕ್ಕೆ ಸಲಹೆ ನೀಡಿದ್ದೇನೆ’ ಎಂದು ಹೇಳಿದ್ದಾರೆ.

‘ಒಂದು ವೇಳೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ವರದಿ ಪರಿಗಣನೆ ಸಾಧ್ಯವಾಗದಿದ್ದರೆ ಹೊಸ ಆಯೋಗವನ್ನು ರಚನೆ ಮಾಡಿ ಸಮೀಕ್ಷೆ ನಡೆಸುವುದು ಸೂಕ್ತ. ಅಲ್ಲಿಯವರೆಗೆ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬಾರದು. ಇಲ್ಲದಿದ್ದರೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಸಿಗದಂತೆ ಆಗುತ್ತದೆ’ ಎಂದು ಹೇಳಿದ್ದಾರೆ.

ADVERTISEMENT

‘ಮೀಸಲು ಸೌಲಭ್ಯ ಒದಗಿಸುವ ಮುನ್ನ ಸಮೀಕ್ಷೆ ನಡೆಸಬೇಕು ಎಂದು ನ್ಯಾಯಾಲಯ ಹೇಳಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಈಗಾಗಲೇ ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದೆ. ಆ ವರದಿಯನ್ನು ಪರಿಗಣಿಸುವ ಸಾಧ್ಯತೆ ಕುರಿತಾಗಿಯೂ ರಾಜ್ಯ ಸರ್ಕಾರ ಪರಿಶೀಲನೆ ನಡೆಸಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ಹಿಂದುಳಿದ ವರ್ಗದವರನ್ನು ಸಾಮಾನ್ಯ ವರ್ಗದಲ್ಲಿ ಸೇರಿಸಿ ಚುನಾವಣೆ ನಡೆಸಲು ಸಾಧ್ಯವಿಲ್ಲ. ಮೀಸಲು ಸೌಲಭ್ಯ ಕಲ್ಪಿಸದೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.