ADVERTISEMENT

ಸಂಘ ಪರಿವಾರ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ?: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 9:03 IST
Last Updated 14 ಫೆಬ್ರುವರಿ 2021, 9:03 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? ಯಾರಾದರೂ ಉತ್ತರಿಸುವಿರಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ರಾಜ್ಯಸರ್ಕಾರದವಿರುದ್ಧ ಸರಣಿ ಟ್ವೀಟ್‌ ಮಾಡಿರುವ ಅವರು, ‘ ಮೀಸಲಾತಿ ಹೆಚ್ಚಳಕ್ಕಾಗಿ ಆಧಾರ ಕೋರುತ್ತಿರುವ ನ್ಯಾಯಾಲಯಕ್ಕೆ ಕರ್ನಾಟಕದಲ್ಲಿ ನಡೆದಿರುವ ಸಾಮಾಜಿಕ-ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯೇ ಉತ್ತರ. ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳದ ಪರವಾಗಿದ್ದರೆ ಮೊದಲು ನಡೆಸಿದ್ದ ಈ ಸಮೀಕ್ಷೆಯನ್ನು ಸ್ವೀಕರಿಸಿ, ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು’ ಎಂದು ಹೇಳಿದ್ದಾರೆ.

‘ಈಗಿನ ಮೀಸಲಾತಿ ಬದಲಾವಣೆ-ಹೆಚ್ಚಳದ ಬೇಡಿಕೆಗೆ ತಮಿಳುನಾಡಿನ ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಶೇಕಡಾ 73ಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರ್ಕಾರವೇ ಮಾಡಿರುವ ಕಾನೂನು ಮಾತ್ರ ಪರಿಹಾರ. ಅದರ ಅನುಷ್ಠಾನ ಕೇಂದ್ರದ ಸರ್ಕಾರದ ಕೈಯಲ್ಲಿದೆ’ ಎಂದಿದ್ದಾರೆ.

ADVERTISEMENT

ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಮರೆತುಬಿಟ್ಟಿದ್ದರೆ ನೆನಪಿಸಲು ಬಯಸುತ್ತೇನೆ. ಕೇಂದ್ರ ಮತ್ತು ರಾಜ್ಯದಲ್ಲಿರುವುದು ಭಾರತೀಯ ಜನತಾ ಪಕ್ಷದ ಸರ್ಕಾರ. ಅಲ್ಲಿನ ಪ್ರಧಾನಿ ನರೇಂದ್ರ ಮೋದಿ, ಇಲ್ಲಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ’ ಎಂದು ತಿಳಿಸಿದ್ದಾರೆ.

‘ಮೀಸಲಾತಿಯನ್ನು ನೇರವಾಗಿ ವಿರೋಧಿಸಲಿಕ್ಕಾಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸುವ ಕುಟಿಲಕಾರಸ್ಥಾನಕ್ಕೆ ಅಮಾಯಕ ಜನತೆ ಬಲಿಯಾಗಬಾರದು' ಎಂದು ಹೇಳಿದ್ದಾರೆ.

ಮಂಡಲ್ ವರದಿಯನ್ನು ವಿರೋಧಿಸಿ ಮೈಗೆ ಬೆಂಕಿಹಚ್ಚಿಕೊಂಡವರು ಯಾರು? ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ವಿರೋಧಿಸಿ ಬೀದಿಗಿಳಿದವರು ಯಾರು? ಸ್ಥಳೀಯ ಸಂಸ್ಥೆಗಳಲ್ಲಿನ ಮೀಸಲಾತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ರಾಮಾ ಜೋಯಿಸ್ ಯಾವ ಪಕ್ಷದವರು? ಉತ್ತರಿಸುವಿರಾ’ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿರುವ ಬಿಜೆಪಿ ನಾಯಕರು ಸಾಲುಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ? ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕುತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.