ADVERTISEMENT

ಮರ್ಯಾದೆಗೇಡಿಯ ಮಾನ ವಿಧಾನಸೌಧದಲ್ಲಿಯೇ ಹರಾಜು: ಎಚ್‌.ಡಿ. ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2025, 15:27 IST
Last Updated 20 ಮಾರ್ಚ್ 2025, 15:27 IST
ಎಚ್‌.ಡಿ. ಕುಮಾರಸ್ವಾಮಿ
ಎಚ್‌.ಡಿ. ಕುಮಾರಸ್ವಾಮಿ   

ನವದೆಹಲಿ: ‘ಕುಮಾರಸ್ವಾಮಿ ಮರ್ಯಾದೆಯಿಂದ ಇದ್ದರೆ ಕ್ಷೇಮ’ ಎಂದಿದ್ದ ಮರ್ಯಾದೆಗೇಡಿಯ ಮಾನ ವಿಧಾನಸೌಧದಲ್ಲಿಯೇ ಹರಾಜು ಆಗಿದೆ’ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. 

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ‘ಮರ್ಯಾದೆಗೇಡಿ ಹಾಗೂ ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು ಹತಾಶೆ ಅಷ್ಟೆ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! ಇಷ್ಟು ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ!’ ಎಂದಿದ್ದಾರೆ. 

‘ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ... ಇದೂ ಒಂದು ಬದುಕೇ? ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ವಿಷಸರ್ಪ ನನ್ನೆಡೆಗೆ ನಾಲಿಗೆ ಚಾಚಿದೆ. ಇಂಥ ಕ್ರಿಮಿನಲ್ ಒಬ್ಬ ಕೆಟ್ಟ ಅಲೋಚನೆಗಳಲ್ಲಿ ದಿನಪೂರ್ತಿ ಮುಳುಗಿರುವುದು ಸಹಜ. ಕ್ರಿಮಿನಲ್‌ನ ಚಾಳಿಯೇ ಧಮ್ಕಿ ಹಾಕುವುದು. ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು... ಇದರಲ್ಲಿ ನನಗೇನೂ ಅಚ್ಚರಿ ಇಲ್ಲ’ ಎಂದು ಅವರು ಹೇಳಿದ್ದಾರೆ. 

ADVERTISEMENT

‘ನಾನು ಭೂ ಒತ್ತುವರಿ ಮಾಡಿದ್ದೇನೋ ಇಲ್ಲವೋ ಕಾನೂನು ವ್ಯಾಪ್ತಿಯಲ್ಲಿ ತೀರ್ಮಾನವಾಗುತ್ತದೆ. ಈಗ ನನ್ನ ಮರ್ಯಾದೆ ವಿಷಯ ಇರಲಿ, ಇವತ್ತು ಸ್ವಪಕ್ಷೀಯರೇ ಈ ಮರ್ಯಾದೆಗೇಡಿಯ ಮಾನವನ್ನು ವಿಧಾನಸೌಧದಲ್ಲಿಯೇ ಹರಾಜು ಹಾಕಿದ್ದಾರೆ! ಅದಕ್ಕೆ ಉತ್ತರವೇನು’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.