ಬೆಂಗಳೂರು: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೋಮವಾರ ಇಲ್ಲಿ ಭೇಟಿ ಮಾಡಿ, ಅರ್ಧ ಗಂಟೆ ಸಮಾಲೋಚಿಸಿದರು.
ರಾಜ್ಯದಲ್ಲಿ ಎನ್‌ಡಿಎ ಮೈತ್ರಿಯನ್ನು ಮತ್ತಷ್ಟು ಬಲಪಡಿಸಿ, ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು ಎಂದು ವಿಜಯೇಂದ್ರ ತಿಳಿಸಿದರು.
ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರದ ವಿರುದ್ಧ ಜಂಟಿಯಾಗಿ ಹೋರಾಟ ಮಾಡಲು ರಾಜ್ಯಮಟ್ಟದ ಸಮನ್ವಯ ಸಮಿತಿ ರಚಿಸಲು ಉಭಯ ಪಕ್ಷಗಳು ಈ ಹಿಂದೆಯೇ ತೀರ್ಮಾನಿಸಿದ್ದವು. ಆದರೆ, ಸಮಿತಿ ರಚನೆ ಆಗಿರಲಿಲ್ಲ. ‘ಈ ಸಮಿತಿಯನ್ನು ಶೀಘ್ರ ರಚಿಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಬೇಕು ಎಂದು ಉಭಯ ನಾಯಕರು ಚರ್ಚಿಸಿದರು‘ ಎಂದು ಮೂಲಗಳು ಹೇಳಿವೆ.
ಕಳೆದ ಮೂರು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿದ್ದ ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಪಕ್ಷದ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.