ಬೆಂಗಳೂರು: ಕರಾವಳಿಯಲ್ಲಿ ಶುಕ್ರವಾರದಿಂದ ಮೂರು ದಿನಗಳು ಮಳೆಯ ಜತೆಗೆ ಭಾರಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಎಚ್ಚರವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗಂಟೆಗೆ 35ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಜತೆಗೆ ಸಮುದ್ರದಲ್ಲಿ ಅಲೆಗಳ ಉಬ್ಬರ ಉಂಟಾಗುವ ಸಂಭವವಿದೆ. ಆದ್ದರಿಂದ ಸಣ್ಣ ಹಡಗುಗಳು ಸಂಚರಿಸದಂತೆ, ಸಮುದ್ರ ತೀರದ ಮನೋರಂಜನಾ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಸೂಚಿಸಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಕೆಲವೆಡೆ ಶುಕ್ರವಾರವೂ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಉಳಿದೆಡೆ ಮಳೆಯ ತೀವ್ರತೆ ತಗ್ಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದ್ದು, ಒಂದು ಅಥವಾ ಎರಡು ಸ್ಥಳಗಳಲ್ಲಿ ಧಾರಾಕಾರ ಮಳೆಯಾಗುವ ಸಂಭವವಿದೆ. ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಂಭವವಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಶನಿವಾರದಿಂದ ಮಳೆಯ ತೀವ್ರತೆ ರಾಜ್ಯದಾದ್ಯಂತ ಕಡಿಮೆಯಾಗುವ ಸಂಭವವಿದೆ. ಶನಿವಾರ ಮತ್ತು ಭಾನುವಾರದಂದು ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ‘ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.