ADVERTISEMENT

ಕರಾವಳಿಯಲ್ಲಿ ಇಂದಿನಿಂದ ‘ಆರೆಂಜ್ ಅಲರ್ಟ್‌’

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 18:29 IST
Last Updated 11 ಜೂನ್ 2021, 18:29 IST
ಮಳೆ–ಸಾಂದರ್ಭಿಕ ಚಿತ್ರ
ಮಳೆ–ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಇದೇ 12 ರಿಂದ 16ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

‘ಇತ್ತೀಚೆಗಷ್ಟೇ ಮುಂಗಾರು ಆರಂಭಗೊಂಡು ಬಿಡುವು ಪಡೆದಿತ್ತು. ಈಗ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ’.

‘ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಇದೇ 16ರವರೆಗೆ ‘ಆರೆಂಜ್ ಅಲರ್ಟ್‌’ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ ಗರಿಷ್ಠ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಇದೇ 14ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು’ ಎಂದೂ ಇಲಾಖೆ ಎಚ್ಚರಿಸಿದೆ.

ADVERTISEMENT

‘ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಇದೇ 14 ಮತ್ತು 15ರಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಇರಲಿದ್ದು, ಒಣಹವೆ ಮುಂದುವರಿಯಲಿದೆ. ಕೆಲವೆಡೆ ಸಾಧಾರಣ ಮಳೆಯಾಗಬಹುದು’ ಎಂದು ಮಾಹಿತಿ ನೀಡಿದೆ.

ಮಳೆ–ಎಲ್ಲಿ, ಎಷ್ಟು?: ಪಣಂಬೂರು ಹಾಗೂ ಕಾರ್ಕಳದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಸುಳ್ಯ 4, ಮಂಗಳೂರು, ಕುಂದಾಪುರ, ಮೂಡುಬಿದರೆ 3, ಭಟ್ಕಳ, ಸುಬ್ರಹ್ಮಣ್ಯ, ಭಾಗಮಂಡಲ 2, ಕಾರವಾರ, ಧರ್ಮಸ್ಥಳ, ಚಿಂಚೋಳಿ, ಶೃಂಗೇರಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ರಾಯಚೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.