ADVERTISEMENT

ಇಂದೂ ಸಿಡಿಲು ಸಹಿತ ಧಾರಾಕಾರ ಮಳೆ ಸಾಧ್ಯತೆ; 16 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್‌’

​ಪ್ರಜಾವಾಣಿ ವಾರ್ತೆ
Published 17 ಮೇ 2022, 19:45 IST
Last Updated 17 ಮೇ 2022, 19:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೇ 18 ಮತ್ತು 19ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ 16 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್‌’ ಮುಂದುವರಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ18ರಂದು ಆರೆಂಜ್ ಅಲರ್ಟ್‌ ಹಾಗೂಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಇರಲಿದೆ. ಕರಾವಳಿಯಲ್ಲಿ ಗಂಟೆಗೆ ಗರಿಷ್ಠ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ADVERTISEMENT

ಮಳೆ–ಎಲ್ಲಿ, ಎಷ್ಟು?:ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಮಂಗಳವಾರ 12 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಮೂಡುಬಿದರೆ 11, ಮೈಸೂರು 9, ಶ್ರೀರಂಗಪಟ್ಟಣ, ಪಾಂಡವಪುರ 8, ಮಧುಗಿರಿ, ಮಳವಳ್ಳಿ 7, ಶಿಡ್ಲಘಟ್ಟ, ತೊಂಡೇಬಾವಿ, ಭದ್ರಾವತಿ, ಸಕಲೇಶಪುರ 6, ಮಂಗಳೂರು, ನಂಜನಗೂಡು 5, ಉಡುಪಿ, ಶಿರಸಿ, ಪುತ್ತೂರು, ಬೆಳ್ತಂಗಡಿ, ತಿಪಟೂರು, ಶಿರಾ 4, ಕುಂದಾಪುರ, ಕಡೂರು, ಕೊಪ್ಪ, ಹಿರಿಯೂರು, ದೊಡ್ಡಬಳ್ಳಾಪುರ, ಹುಣಸೂರು, ಚಿಂತಾಮಣಿ, ಚಿಕ್ಕಬಳ್ಳಾಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ ಮೈಸೂರು, ಚಿಕ್ಕಮಗಳೂರಿನಲ್ಲಿ ತಲಾ 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.