ADVERTISEMENT

ರಾಜ್ಯೋತ್ಸವ: 5 ಗೀತೆಗಳ ಗಾಯನಕ್ಕೆ ಆದೇಶ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2023, 0:30 IST
Last Updated 21 ಅಕ್ಟೋಬರ್ 2023, 0:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.1ರಂದು ಶಾಲಾ–ಕಾಲೇಜು, ಸರ್ಕಾರಿ ಕಚೇರಿಗಳು ಸೇರಿ ವಿವಿಧೆಡೆ ಗೊತ್ತುಪಡಿಸಿದ ಕನ್ನಡದ ಐದು ಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ಕನ್ನಡಾಂಬೆಗೆ ಗೀತ ನಮನ ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ. 

‘ಕರ್ನಾಟಕ’ ನಾಮಕರಣದ ಸುವರ್ಣ ಮಹೋತ್ಸವದ ಪ್ರಯುಕ್ತ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ 2023ರ ನ.1ರಿಂದ 2024ರ ನ.1ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಈ ಅಭಿಯಾನದಡಿ ನ.1ರಂದು ಹುಯಿಲುಗೋಳ ನಾರಾಯಣರಾಯರ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’, ಕುವೆಂಪು ಅವರ ‘ಎಲ್ಲಾದರು ಇರು ಎಂತಾದರು ಇರು’, ದ.ರಾ. ಬೇಂದ್ರೆ ಅವರ ‘ಒಂದೇ ಒಂದೇ ಕರ್ನಾಟಕ ಒಂದೇ’, ಸಿದ್ದಯ್ಯ ಪುರಾಣಿಕ ಅವರ ‘ಹೊತ್ತಿತೋ ಹೊತ್ತಿತು ಕನ್ನಡದ ದೀಪ’ ಹಾಗೂ ಚನ್ನವೀರ ಕಣವಿ ಅವರ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಗೀತೆಯನ್ನು ಕಡ್ಡಾಯವಾಗಿ ಹಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ADVERTISEMENT

ಧ್ವಜಾರೋಹಣದ ಬಳಿಕ, ರಾಷ್ಟ್ರಗೀತೆ, ನಾಡಗೀತೆ ಹಾಗೂ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ನಿಗದಿಪಡಿಸಿದ ಐದು ಗೀತೆಗಳನ್ನು ಜಿಲ್ಲಾಮಟ್ಟ, ತಾಲ್ಲೂಕುಮಟ್ಟ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಹಾಡಬೇಕು. ಶಾಲಾ–ಕಾಲೇಜುಗಳು, ಸರ್ಕಾರಿ, ಅರೆ ಸರ್ಕಾರಿ ಹಾಗೂ ನಿಗಮ ಮಂಡಳಿಗಳ ಕಚೇರಿಗಳು, ಬ್ಯಾಂಕ್‌ಗಳು ಮತ್ತು ಸಂಘ–ಸಂಸ್ಥೆಗಳು ರಾಜ್ಯೋತ್ಸವ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿ ಈ ಗೀತೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.