ADVERTISEMENT

Covid-19 Karnataka Updates: 1,275 ಹೊಸ ಪ್ರಕರಣ, 4 ಮಂದಿ ಸಾವು

ಏಜೆನ್ಸೀಸ್
Published 17 ಮಾರ್ಚ್ 2021, 19:17 IST
Last Updated 17 ಮಾರ್ಚ್ 2021, 19:17 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ರಾಜ್ಯದಲ್ಲಿ ಬುಧವಾರ 1,275 ಪ್ರಕರಣಗಳು ದೃಢಪಟ್ಟಿವೆ. ಮೂರು ತಿಂಗಳಲ್ಲಿ 24 ಗಂಟೆಗಳ ಅವಧಿಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 10 ಸಾವಿರದ ಗಡಿ (10,220) ದಾಡಿದೆ.

ರಾಜ್ಯದಲ್ಲಿ ಡಿಸೆಂಬರ್ ಕೊನೆಯ ವಾರದಿಂದ ಪ್ರಕರಣಗಳ ಸಂಖ್ಯೆ ಇಳಿಮುಖ ಕಂಡಿತ್ತು. 500ರ ಗಡಿಯ ಆಸುಪಾಸಿಗೆ ಬಂದಿದ್ದ ಹೊಸ ಪ್ರಕರಣಗಳ ಸಂಖ್ಯೆ ಮೂರು ವಾರದಿಂದ ಮತ್ತೆ ಏರುಗತಿ ಪಡೆದುಕೊಂಡಿದೆ. 48 ಗಂಟೆಗಳ ಅವಧಿಯಲ್ಲಿ 2,410 ಮಂದಿ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಈ ತಿಂಗಳು 17 ದಿನಗಳಲ್ಲಿ 12,363 ಮಂದಿ ಕೊರೊನಾ ಸೋಂಕಿತರಾಗಿರುವುದು ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 727 ಪ್ರಕರಣಗಳು ದೃಢಪಟ್ಟಿವೆ.

ಸೋಂಕಿತರಲ್ಲಿ ಬೆಂಗಳೂರಿನಲ್ಲಿ ಮೂವರು ಹಾಗೂ ಮೈಸೂರಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,407ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ ಮತ್ತೆ 479 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 9.40 ಲಕ್ಷ ದಾಟಿದೆ. ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗುವವರ ಸಂಖ್ಯೆ ಹೆಚ್ಚಳವಾಗಿದ್ದು, ಸದ್ಯ 134 ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.

ADVERTISEMENT

2 ಕೋಟಿ ದಾಟಿದ ಪರೀಕ್ಷೆ: ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಏರಿಕೆ ಮಾಡಲಾಗಿದೆ. ಒಂದು ದಿನದ ಅವಧಿಯಲ್ಲಿ 86,648 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಈವರೆಗೆ ನಡೆಸಲಾದ ಪರೀಕ್ಷೆಗಳ ಸಂಖ್ಯೆ 2 ಕೋಟಿ ಗಡಿ ದಾಟಿದೆ. ಇದರಲ್ಲಿ 1.59 ಕೋಟಿ ಪರೀಕ್ಷೆಗಳನ್ನು ಆರ್‌ಟಿ–ಪಿಸಿಆರ್ ವಿಧಾನದ ಮೂಲಕ ನಡೆಸಲಾಗಿದೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಏರುಗತಿ ಪಡೆದುಕೊಂಡಿದೆ. ಹೊಸದಾಗಿ 786 ಪ್ರಕರಣಗಳು ವರದಿಯಾಗಿದ್ದು, ಈವರೆಗೆ ಸೋಂಕಿತರ ಸಂಖ್ಯೆ 4.13 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 35 ಪ್ರಕರಣಗಳು ದೃಢಪಟ್ಟಿವೆ. ಅಲ್ಲಿ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 54,584ಕ್ಕೆ ತಲುಪಿದೆ. ದಕ್ಷಿಣ ಕನ್ನಡದಲ್ಲಿ 72, ಕಲಬುರ್ಗಿಯಲ್ಲಿ 61, ಬೀದರ್‌ನಲ್ಲಿ 47, ಉಡುಪಿಯಲ್ಲಿ 42 ಪ್ರಕರಣಗಳು ಹೊಸದಾಗಿ ವರದಿ‌ಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.