ADVERTISEMENT

ಮುಸ್ಲಿಮರಿಗೆ ಮೀಸಲು | ಮಸೂದೆಗೆ ತಡೆ: ರಾಜ್ಯಪಾಲರಿಗೆ ಶೋಭಾ ಪತ್ರ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2025, 13:19 IST
Last Updated 21 ಮಾರ್ಚ್ 2025, 13:19 IST
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ   

ನವದೆಹಲಿ: ಕರ್ನಾಟಕ ಸರ್ಕಾರದ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) ತಿದ್ದುಪಡಿ ಮಸೂದೆಯನ್ನು ತಡೆ ಹಿಡಿಯಬೇಕು ಎಂದು ಒತ್ತಾಯಿಸಿ ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರಿಗೆ ಶುಕ್ರವಾರ ಪತ್ರ ಬರೆದಿದ್ದಾರೆ. 

‘ಈ ಮಸೂದೆಯು ಅಸಂವಿಧಾನಿಕ ಹಾಗೂ ತಾರತಮ್ಯದಿಂದ ಕೂಡಿದೆ. ಇದು ಭಾರತದ ಸಂವಿಧಾನದ ಆಶಯಗಳಿಗೆ ವಿರುದ್ಧ. ಸಾಮಾಜಿಕ ಹಾಗೂ ಆರ್ಥಿಕ ಹಿಂದುಳಿದಿರುವಿಕೆ ‍ಪರಿಗಣಿಸಿ ಮೀಸಲಾತಿ ನೀಡಬಹುದು. ಆದರೆ, ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಲು ಅವಕಾಶ ಇಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್‌ ಈ ಹಿಂದೆ ತೀರ್ಪು ನೀಡಿದೆ’ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. 

ಮುಸ್ಲಿಮರ ಓಲೈಕೆಯ ಭಾಗವಾಗಿ ಕೆಟಿಪಿಪಿ ಕಾಯ್ದೆಗೆ ಸರ್ಕಾರ ತಿದ್ದುಪಡಿ ತಂದಿದೆ. ಆರ್ಥಿಕವಾಗಿ ಹಿಂದುಳಿದವರನ್ನು ಸಬಲೀಕರಣ ಮಾಡುವ ಉದ್ದೇಶ ಇದರ ಹಿಂದಿಲ್ಲ. ಇದೊಂದು ಕೆಟ್ಟ ಪರಂಪರೆ ಹಾಗೂ ಅಪಾಯಕಾರಿ ಬೆಳವಣಿಗೆ.  ಇದನ್ನು ವಿರೋಧಿಸಿ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆ ಇದೆ. ಹಿರಿಯ ಕಾನೂನು ತಜ್ಞರ ಅಭಿಪ್ರಾಯ ಪಡೆದು ಭಾರತದ ಸಂವಿಧಾನದ ಆಶಯಕ್ಕೆ ತಕ್ಕಂತೆ ಮುಂದಿನ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ. 

ADVERTISEMENT

ಗುತ್ತಿಗೆ ಜಿಹಾದ್‌; ಪಾತ್ರಾ ಆರೋಪ 

ಈ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ ಪಡೆಯುವ ಮೂಲಕ ಕಾಂಗ್ರೆಸ್ ಸರ್ಕಾರವು ‘ಗುತ್ತಿಗೆ ಜಿಹಾದ್’ ಅನುಸರಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್‌ ಪಾತ್ರಾ ಆರೋಪಿಸಿದರು. 

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಒತ್ತಡಕ್ಕೆ ಮಣಿದು ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ. ಇದು ತುಷ್ಟೀಕರಣದ ರಾಜಕೀಯದ ಉತ್ತುಂಗ’ ಎಂದರು. ಕಾಂಗ್ರೆಸ್ ತುಷ್ಟೀಕರಣ ರಾಜಕೀಯ ನಡೆಸಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ 100ರಷ್ಟು ಕೋಟಾವನ್ನೂ ನೀಡಬಹುದು ಎಂದು ಅವರು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.