ಬೆಳಗಾವಿ: ‘ದೇವಸ್ಥಾನಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಿರುವುದು ಬಿಜೆಪಿಯ ರಹಸ್ಯ ಕಾರ್ಯಸೂಚಿಯಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ‘ನಮ್ಮದು ಜಾತ್ಯತೀತ ದೇಶ. ವಿವಿಧ ಜಾತಿ–ಧರ್ಮಗಳು ಕೂಡಿದೆ. ಎಲ್ಲರೊಂದಿಗೂ ಒಡನಾಟ ಇರುತ್ತದೆ. ಮುಸ್ಲಿಮರಿಗೆ ವ್ಯಾಪಾರವನ್ನು ಸಂಪೂರ್ಣವಾಗಿ ನಿರ್ಬಂಧಿಸುವುದು ಅಸಾಧ್ಯ. ಎಲ್ಲ ಸಮುದಾಯದವರೂ ಒಂದಾಗಿ ಬಾಳುವುದು ಹಿಂದಿನಿಂದಲೂ ಇದೆ’ ಎಂದರು.
‘ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ವಿವಾದ ಸೃಷ್ಟಿಸುವಂತಹ ಸೂಕ್ಷ್ಮ ವಿಚಾರಗಳನ್ನೇ ತನ್ನ ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತಿದ್ದಾರೆ. ಹಿಜಾಬ್, ಕೇಸರಿ ಶಾಲು, ಶಿವಮೊಗ್ಗದ ಹರ್ಷ ಹತ್ಯೆ ವಿಷಯದ ಬಳಿಕ ‘ದಿ ಕಾಶ್ಮೀರ್ ಫೈಲ್ಸ್ ’ ಚಲನಚಿತ್ರವನ್ನು ಇಟ್ಟುಕೊಂಡಿದ್ದಾರೆ. ಆ ಚಿತ್ರವೂ ಚುನಾವಣಾ ಪ್ರಚಾರದ ಒಂದು ಭಾಗವಾಗಿದೆ. ಒಂದಿಲ್ಲೊಂದು ವಿವಾದಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದೆ’ ಎಂದು ದೂರಿದರು.
‘ಆರು ತಿಂಗಳಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದರೊಂದಿಗೆ ಕರ್ನಾಟಕದ ವಿಧಾನಸಭೆ ಚುನಾವಣೆ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಬಿಜೆಪಿ ಸಮೀಕ್ಷೆಯನ್ನೂ ನಡೆಸುತ್ತಿದೆ. ಚುನಾವಣೆ ಎದುರಿಸಲು ಕಾಂಗ್ರೆಸ್ ಕೂಡ ಸಿದ್ಧವಾಗಿದೆ’ ಎಂದು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.