ಬೆಂಗಳೂರು: ಕರ್ನಾಟಕ ಪರಿಶಿಷ್ಟ ಜಾತಿ–ಪರಿಶಿಷ್ಟ ಬುಡಕಟ್ಟುಗಳ ಆಯೋಗಕ್ಕೆ ಅಧ್ಯಕ್ಷರು, ಸದಸ್ಯರನ್ನು ಕೂಡಲೇ ನೇಮಕ ಮಾಡಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ. ವೆಂಕಟಸ್ವಾಮಿ ಆಗ್ರಹಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎರಡೂವರೆ ವರ್ಷಗಳಿಂದ ಅಧ್ಯಕ್ಷ, ಸದಸ್ಯರನ್ನು ನೇಮಕ ಮಾಡಿಲ್ಲ. ಆಯೋಗ ಖಾಲಿ ಇದೆ’ ಎಂದು ಹೇಳಿದರು.
2003ರಲ್ಲಿ ಆಯೋಗವು ಅಸ್ತಿತ್ವಕ್ಕೆ ಬಂದಿದೆ. ಅಲ್ಲಿಂದ ಇಲ್ಲಿಯವರೆಗೆ ಯಾರೂ ಸಮರ್ಥವಾಗಿ ಕೆಲಸ ಮಾಡಿಲ್ಲ. ಈಗಿನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಆಯೋಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ರಾಜ್ಯದಲ್ಲಿ ದಲಿತ ಸಮುದಾಯಗಳಿಗೆ ರಕ್ಷಣೆ ಮತ್ತು ನ್ಯಾಯ ನೀಡುವಲ್ಲಿ ಸಂಪೂರ್ಣವಾಗಿ ಸೋತಿದೆ ಎಂದು ಆರೋಪಿಸಿದರು.
ಶಾಸಕರಾಗಿದ್ದ ಅಂಜನಾಮೂರ್ತಿ, ನೆಹರು ಓಲೇಕಾರ್, ಈಗ ಐಟಿ–ಬಿಟಿ ಸಚಿವರಾಗಿರುವ ಪ್ರಿಯಾಂಕ್ ಖರ್ಗೆ ಸೇರಿದಂತೆ ಇಲ್ಲಿಯವರೆಗೆ 11 ಮಂದಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಒಂದಿಬ್ಬರನ್ನು ಹೊರತುಪಡಿಸಿ ಯಾರೂ ಸಮರ್ಥವಾಗಿ ಕಾರ್ಯನಿರ್ವಹಿಸಿಲ್ಲ. ಆಯೋಗದಲ್ಲಿ 1,727 ಪ್ರಕರಣಗಳು ಬಾಕಿ ಇವೆ. ಆಯೋಗಕ್ಕೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಎನ್.ಮೂರ್ತಿ, ಜೆ.ಸಿ. ವೆಂಕಟರಮಣಪ್ಪ. ಆರ್. ಮೋಹನ್‌ರಾಜ್, ಲಯನ್ ಬಾಲಕೃಷ್ಣ, ಶಂಕರ್ ರಾಮಲಿಂಗಯ್ಯ, ಆರ್. ಚಂದ್ರಶೇಖರ್, ಪ್ರಶಾಂತ್, ಅರುಣ್ ಟೈಗರ್, ಕೆ. ಜಗದೀಶ್, ದಲಿತ್ ರಮೇಶ್, ಸ್ವಪ್ನಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.