ಬೆಂಗಳೂರು: ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ 2026–27ನೇ ಸಾಲಿನಿಂದ ‘ಇ–ಹಾಜರಾತಿ’ ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮರು ಆದೇಶ ಹೊರಡಿಸಿದೆ.
ಮಕ್ಕಳ ಮುಖಚರ್ಯೆ ಗುರುತಿಸುವ ಮೂಲಕ ಇ–ಹಾಜರಾತಿ ದಾಖಲಿಸುವ ‘ನಿರಂತರ’ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವುದಾಗಿ ಕಳೆದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯವಾದ ಕೃತಕ ಬುದ್ಧಿಮತ್ತೆ ಆಧಾರಿತ ಮೊಬೈಲ್ ಹಾಗೂ ಇತರೆ ಪರಿಕರಗಳನ್ನು ರಾಜ್ಯದ 52,686 ಶಾಲೆಗಳಲ್ಲಿ ಅಳವಡಿಸಲು ₹5 ಕೋಟಿ ಅನುದಾನ ನೀಡಲಾಗಿತ್ತು. ಆದರೆ, 2025–26ನೇ ಸಾಲಿನಲ್ಲಿ ಅನುಷ್ಠಾನ ಸಾಧ್ಯವಾಗಿರಲಿಲ್ಲ. ಹಾಗಾಗಿ, ಹಿಂದಿನ ಆದೇಶ ಹಿಂಪಡೆದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ–ಆಡಳಿತ ಕೇಂದ್ರದ ಮೂಲಕ ₹2.16 ಕೋಟಿ ವೆಚ್ಚದಲ್ಲಿ 2026–27ನೇ ಸಾಲಿನಿಂದ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ.
ಬೋಧಕ, ಬೋಧಕೇತರರಿಗೆ ‘ಕಾಮ್ಸ್’
ಸರ್ಕಾರಿ ಶಾಲೆ ಹಾಗೂ ಕಾಲೇಜುಗಳ ಶಿಕ್ಷಕರು, ಮುಖ್ಯಶಿಕ್ಷಕರು, ಉಪನ್ಯಾಸಕರು, ಪ್ರಾಂಶುಪಾಲರು ಸೇರಿದಂತೆ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಮೊಬೈಲ್ ಅಪ್ಲಿಕೇಷನ್ ಮೂಲಕ ಹಾಜರಾತಿ ದೃಢೀಕರಣ ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಮತ್ತೊಂದು ಆದೇಶ ಹೊರಡಿಸಿದೆ.
ಇಲಾಖೆಯ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಯಂತ್ರಗಳನ್ನು ಕೈಬಿಟ್ಟು, ಮೊಬೈಲ್ ಆಧಾರಿತ ‘ಕಾಮ್ಸ್’ (ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ) ಜಾರಿಗೊಳಿಸಲು ಸೂಚಿಸಲಾಗಿದೆ.
ಇಲಾಖೆ ಈಗಾಗಲೇ ಪಿಯು ಕಾಲೇಜು ಉಪನ್ಯಾಸಕರು ಹಾಗೂ ಕೆಲ ಆಯ್ದ ಶಾಲೆಗಳಲ್ಲಿ ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ ಜಾರಿಗೆ ತಂದಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ–ಕಾಲೇಜುಗಳಿಗೂ ಎಐ ಆಧಾರಿತ ಮುಖ ಗುರುತಿಸುವಿಕೆ ಹಾಜರಾತಿ ವ್ಯವಸ್ಥೆ ಕಡ್ಡಾಯವಾಗಿ ಜಾರಿಯಾಗಲಿದೆ. ಈ ನಿಯಮ ಪರೀಕ್ಷಾ ಕಾರ್ಯ ಹಾಗೂ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸುವವರಿಗೂ ಅನ್ವಯವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.