ADVERTISEMENT

ಸ್ಮಾರ್ಟ್‌ ಮೀಟರ್‌ ಟೆಂಡರ್‌: ಸಚಿವ ಕೆ.ಜೆ.ಜಾರ್ಜ್‌ ವಿರುದ್ಧದ ವಿಚಾರಣೆಗೆ ತಡೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2025, 15:19 IST
Last Updated 6 ಆಗಸ್ಟ್ 2025, 15:19 IST
ಕೆ.ಜೆ.ಜಾರ್ಜ್‌
ಕೆ.ಜೆ.ಜಾರ್ಜ್‌   

ಬೆಂಗಳೂರು: ‘ರಾಜ್ಯದಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ ಸಂಪೂರ್ಣ ಕಾನೂನು ಬಾಹಿರವಾಗಿದೆ’ ಎಂದು ಆಪಾದಿಸಿ ಸಚಿವ ಕೆ.ಜೆ.ಜಾರ್ಜ್‌ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಿಸಲಾಗಿರುವ ಖಾಸಗಿ ದೂರಿನ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಈ ಸಂಬಂಧ ಸಚಿವ ಕೆ.ಜೆ.ಜಾರ್ಜ್‌ ಸಲ್ಲಿಸಿರುವ ರಿಟ್‌ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠ’ದ ನ್ಯಾಯಮೂರ್ತಿ ಎಂ.ಐ.ಅರುಣ್‌ ಬುಧವಾರ ವಿಚಾರಣೆ ನಡೆಸಿದರು.

ಸಚಿವ ಜಾರ್ಜ್‌ ಪರ ಪದಾಂಕಿತ ಹಿರಿಯ ವಕೀಲ ಸಿ.ವಿ.ನಾಗೇಶ್‌ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳೂ ಆದ ಪ್ರಕರಣದ ಫಿರ್ಯಾದುದಾರರಾದ ಬಿಜೆಪಿಯ ಶಾಸಕರಾದ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಎಸ್‌.ಆರ್‌.ವಿಶ್ವನಾಥ್ ಮತ್ತು ಧೀರಜ್‌ ಮುನಿರಾಜು ಅವರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿತು. ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.

ADVERTISEMENT

ಕೋರಿಕೆ ಏನು?: ‘ಭಾರತೀಯ ನ್ಯಾಯ ಸಂಹಿತಾ–2023ರ ಕಲಂ 314, 316 ಮತ್ತು 61, ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ–2018ರ ಕಲಂ 13 (1)ಎ ಮತ್ತು 13(1)ಬಿ ಅಡಿಯಲ್ಲಿ 2025ರ ಜುಲೈ 17ರಂದು ನನ್ನ ವಿರುದ್ಧ ದಾಖಲಿಸಲಾಗಿರುವ ಖಾಸಗಿ ದೂರನ್ನು ರದ್ದುಗೊಳಿಸಬೇಕು. ಈ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 175(4)ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ದೂರಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿಗೆ ಜುಲೈ 23ರಂದು ನೀಡಿರುವ ನಿರ್ದೇಶನವನ್ನು ರದ್ದುಪಡಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ಏನಿದು ದೂರು?: ‘ಸ್ಮಾರ್ಟ್‌ ಮೀಟರ್‌ ಟೆಂಡರ್‌ ನೀಡಿಕೆಯಿಂದ ಅಂದಾಜು ₹16 ಸಾವಿರ ಕೋಟಿ ಮೊತ್ತದ ದುರ್ಲಾಭ ಪಡೆಯಲಾಗುತ್ತಿದೆ’ ಎಂದು ಆರೋಪಿಸಿ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ಅಧ್ಯಕ್ಷರೂ ಆದ ಇಂಧನ ಸಚಿವ ಕೆ.ಜೆ.ಜಾರ್ಜ್, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ, ಬೆಸ್ಕಾಂನ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಎಚ್‌.ಜೆ.ರಮೇಶ್‌ ಅವರನ್ನು ಆರೋಪಿಗಳನ್ನಾಗಿ ಹೆಸರಿಸಿ ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ಸೆಷನ್ಸ್‌ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.