
ಬೆಂಗಳೂರು: ಸಾಮಾಜಿಕ ಬಹಿಷ್ಕಾರಕ್ಕೆ ಸಂಪೂರ್ಣ ನಿಷೇಧ ಹೇರಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ಮೂರು ವರ್ಷದವರೆಗೆ ಜೈಲು ಶಿಕ್ಷೆ ಮತ್ತು ₹ 1 ಲಕ್ಷ ದಂಡ ವಿಧಿಸುವ ಕಾನೂನು ಜಾರಿಗೆ ತಂದಿದೆ.
ಸಾಮಾಜಿಕ ಬಹಿಷ್ಕಾರವನ್ನು ಅಪರಾಧವೆಂದು ಪರಿಗಣಿಸಿ ಶಿಕ್ಷೆ ವಿಧಿಸಲು ಅವಕಾಶ ನೀಡುವ ‘ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ಮಸೂದೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅಂಕಿತ ಹಾಕಿದ್ದಾರೆ. ಈ ಕುರಿತು ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದ್ದಿ, ಕಾಯ್ದೆ ರೂಪದಲ್ಲಿ ಜಾರಿಗೆ ಬಂದಿದೆ..
ಬಹಿಷ್ಕರಿಸುವ ತೀರ್ಮಾನ ತೆಗೆದುಕೊಂಡವರು, ಈ ಉದ್ದೇಶದಿಂದ ಸಭೆ, ಪಂಚಾಯಿತಿ, ಜಮಾವಣೆ, ಅಭಿಪ್ರಾಯ ಸಂಗ್ರಹಿಸುವುದು, ಬಹಿಷ್ಕಾರಕ್ಕೆ ಪ್ರತ್ಯಕ್ಷ, ಪರೋಕ್ಷ ಸಹಾಯ, ಒತ್ತಡ, ಪ್ರಚೋದನೆ ನೀಡುವವರನ್ನೂ ಅಪರಾಧಿಗಳೆಂದು ಪರಿಗಣಿಸಿ ಜೈಲು ಅಥವಾ ದಂಡ ಅಥವಾ ಎರಡನ್ನೂ ವಿಧಿಸಲು ಕೂಡಾ ಈ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಈ ಕಾಯ್ದೆಯ ಅನ್ವಯ, ಬಹಿಷ್ಕಾರಕ್ಕೆ ಒಳಗಾದವರು ಪೊಲೀಸ್ ಠಾಣೆ ಅಥವಾ ನ್ಯಾಯಾಧೀಶರಿಗೆ ದೂರು ನೀಡಬಹುದು. ಪ್ರಥಮ ದರ್ಜೆ ನ್ಯಾಯಾಧೀಶರಿಗೆ ವಿಚಾರಣೆಯ ಅಧಿಕಾರ ನೀಡಲಾಗಿದೆ. ನೇರವಾಗಿ ಸಲ್ಲಿಕೆಯಾದ ದೂರಿನ ತನಿಖೆ ನಡೆಸುವಂತೆ ನ್ಯಾಯಾಧೀಶರು ಆದೇಶ ನೀಡಬಹುದು. ಸಂತ್ರಸ್ತರಿಗೆ ಸಹಾಯ ಒದಗಿಸಲು ಮತ್ತು ದಂಡದ ಮೊತ್ತವನ್ನು ಪರಿಹಾರವಾಗಿ ನೀಡಲು ನಿರ್ದೇಶನ ನೀಡಬಹುದು. ಸಾಮಾಜಿಕ ಬಹಿಷ್ಕಾರದಂತಹ ನಿರ್ಧಾರ ತೆಗೆದುಕೊಳ್ಳಲು ನಡೆಸುವ ಸಭೆಗಳ ಕುರಿತು ಮಾಹಿತಿ ಬಂದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನಿಷೇಧಿಸಿ ಆದೇಶಿಸಬಹುದು. ಸಾಮಾಜಿಕ ಬಹಿಷ್ಕಾರ ತಡೆ ಅಧಿಕಾರಿಗಳಾಗಿ ಗ್ರೂಪ್ ‘ಎ’ ಅಧಿಕಾರಿಗಳನ್ನು ಸರ್ಕಾರ ನಿಯೋಜಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.