ಬೆಂಗಳೂರು: ಮೈಕ್ರೊ ಫೈನಾನ್ಸ್ ಕಂಪನಿಗಳು, ಲೇವಾದೇವಿದಾರರು, ಖಾಸಗಿ ವ್ಯಕ್ತಿಗಳಿಂದ ಬಲವಂತದ ಸಾಲ ವಸೂಲಿ ಮತ್ತು ಕಿರುಕುಳ ತಪ್ಪಿಸುವ ಉದ್ದೇಶದಿಂದ ರೂಪಿಸಿದ ‘ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಒತ್ತಡ ತಂತ್ರಗಳ ನಿಷೇಧ) ಸುಗ್ರೀವಾಜ್ಞೆ– 2025’ನ್ನು ವಿವರವಾದ ಸ್ಪಷ್ಟೀಕರಣಗಳ ಸಹಿತ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ಅಂಕಿತಕ್ಕಾಗಿ ರಾಜಭವನಕ್ಕೆ ರಾಜ್ಯ ಸರ್ಕಾರ ಮತ್ತೆ ರವಾನಿಸಿದೆ.
‘ಸಹಜ ನ್ಯಾಯ ಹಾಗೂ ಸಾಲ ನೀಡುವವರ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದೆ’ ಸೇರಿದಂತೆ ಹಲವು ಆಕ್ಷೇಪಗಳನ್ನು ವ್ಯಕ್ತಪಡಿಸಿ ರಾಜ್ಯಪಾಲರು ಫೆ. 7ರಂದು ಸರ್ಕಾರಕ್ಕೆ ಹಿಂದಿರುಗಿಸಿದ್ದರು. ರಾಜ್ಯಪಾಲರು ಎತ್ತಿದ್ದ ಎಲ್ಲ ಆಕ್ಷೇಪಗಳಿಗೆ ಕಾನೂನು ಇಲಾಖೆ ಸಿದ್ಧಪಡಿಸಿದ್ದ ಸಮರ್ಥನೆ, ಸ್ಪಷ್ಟೀಕರಣಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅನುಮೋದನೆ ನೀಡಿದರು.
ಕಾನೂನು ಇಲಾಖೆಯ ಅಧಿಕಾರಿಗಳು ನೀಡಿದ್ದ ಸಮಗ್ರ ವಿವರಗಳ ಸಹಿತ ಸೋಮವಾರ ಬೆಳಿಗ್ಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದ ಕಾನೂನು ಸಚಿವ ಎಚ್.ಕೆ. ಪಾಟೀಲ, ಸುಗ್ರೀವಾಜ್ಞೆ ಹೊರಡಿಸಬೇಕಾದ ಅಗತ್ಯ ಮತ್ತು ರಾಜಕೀಯ ನಿರ್ಧಾರದ ಬಗ್ಗೆ ಚರ್ಚೆ ನಡೆಸಿದರು. ಈ ಸುಗ್ರೀವಾಜ್ಞೆಯು ವ್ಯಕ್ತಿ ಮೂಲಭೂತ ಹಕ್ಕನ್ನು ನಿರ್ಬಂಧಿಸುವುದಿಲ್ಲ, ಸಾಲದಾತರ ಹಿತಾಸಕ್ತಿಯನ್ನು ನಿರ್ಲಕ್ಷಿಸಿಲ್ಲ ಹಾಗೂ ಸಾಲ ವಸೂಲಾತಿಯನ್ನು ನಿರ್ಬಂಧಿಸುವುದಿಲ್ಲ ಎಂದು ವಿವರಣೆ ನೀಡಿದರು.
ನೋಂದಾಯಿತವಲ್ಲದ ಮತ್ತು ಸಾಲ ನೀಡಲು ಪರವಾನಗಿ ಹೊಂದಿರದ ಯಾವುದೇ ವ್ಯಕ್ತಿಯು ಯಾರಿಗೇ ಸಾಲ ಕೊಡಲು ಮತ್ತು ಹೆಚ್ಚಿನ ಬಡ್ಡಿ ಮತ್ತು ಚಕ್ರಬಡ್ಡಿ ಅಥವಾ ದಂಡದ ಬಡ್ಡಿ ವಿಧಿಸಲು ಕಾನೂನಾತ್ಮಕವಾಗಿ ಅಧಿಕಾರ ಹೊಂದಿರುವುದಿಲ್ಲ. ಸಾಲವನ್ನು ಖಾಸಗಿಯಾಗಿ, ಪರವಾನಗಿ ಪಡೆಯದೆ ನೀಡಿ ಹೆಚ್ಚಿನ ಬಡ್ಡಿ ವಸೂಲಿ ಮಾಡಿದರೆ ಅದು ಕಾನೂನು ವಿರೋಧಿ ಕ್ರಮವಾಗಿದೆ. ಅಂತಹ ಸಾಲವು ವಸೂಲಿಗೆ ಅರ್ಹವೂ ಅಲ್ಲ, ಯೋಗ್ಯವೂ ಅಲ್ಲ ಎಂದೂ ರಾಜ್ಯಪಾಲರಿಗೆ ನೀಡಿರುವ ಸ್ಪಷ್ಟೀಕರಣದಲ್ಲಿ ವಿವರಿಸಲಾಗಿದೆ.
ಕಾನೂನಾತ್ಮಕವಾಗಿ ನೋಂದಾಯಿತ ಸಂಸ್ಥೆ ಅಥವಾ ವ್ಯಕ್ತಿಗಳು ನಿಯಮಾನುಸಾರ ನೈಜ ಸಾಲ ನೀಡಿದವರು ವಸೂಲಿ ಮಾಡಬಾರದೆಂದು ಅಥವಾ ಅಂತಹ ಸಾಲಗಳು ವಸೂಲಿಗೆ ಅರ್ಹವಲ್ಲವೆಂದು ಎಲ್ಲಿಯೂ ಹೇಳಿಲ್ಲ. ಕೇವಲ ಸಾಲ ವಸೂಲಾತಿಗೆ ಕಾನೂನು ಬಾಹಿರ ಕ್ರಮಗಳನ್ನು ಕೈಗೊಳ್ಳುವುದು, ಹಿಂಸೆ ಮಾಡುವುದು ಮತ್ತು ಒತ್ತಡ ತಂತ್ರ ಹೇರುವುದು ಹಾಗೂ ಕಿರುಕುಳಕ್ಕೆ ಕಾರಣವಾಗುವುದನ್ನು ತಡೆಯಲು, ನಿಷೇಧಿಸಲು ಈ ಸುಗ್ರೀವಾಜ್ಞೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದೂ ರಾಜ್ಯ ಸರ್ಕಾರ ಸಮರ್ಥನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.