
ಸಾಕೇತ್ ಶ್ರೀನಿವಾಸಯ್ಯ
(ಚಿತ್ರ–@Cloudwatch199)
ಬೆಂಗಳೂರು: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿರುವ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರ ಪತ್ತೆಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನೆರವು ಕೋರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಪತ್ರ ಬರೆದಿದ್ದಾರೆ.
22 ವರ್ಷದ ಸಾಕೇತ್ ಫೆ. 12ರ ಬೆಳಿಗ್ಗಿನಿಂದ ಕಾಣೆಯಾಗಿದ್ದಾರೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಮೂಲಕ ಸ್ಥಳೀಯ ಕಾನೂನು ಜಾರಿ ಸಂಸ್ಥೆಗಳ ಜೊತೆ ಸಮನ್ವಯ ಸಾಧಿಸಿ ಸಾಕೇತ್ ಕುಟುಂಬಕ್ಕೆ ಸಹಾಯ ಮಾಡುವುದು ಸೇರಿದಂತೆ ಎಲ್ಲ ಅಗತ್ಯ ನೆರವು ನೀಡಬೇಕು ಎಂದು ಸಚಿವಾಲಯದ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರಿಗೆ ಬರೆದಿರುವ ಪತ್ರದಲ್ಲಿ ಶಾಲಿನಿ ಮನವಿ ಮಾಡಿದ್ದಾರೆ.
‘ಸಾಕೇತ್ ಅವರು ಪ್ರಸ್ತುತ ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ ವ್ಯಾಸಂಗ ಮಾಡುತ್ತಿದ್ದಾರೆ. ನಾಪತ್ತೆ ಆಗಿರುವ ಬಗ್ಗೆ ಬರ್ಕ್ಲಿ ಪೊಲೀಸ್ ಇಲಾಖೆಯಲ್ಲಿ ದೂರು ದಾಖಲಾಗಿದ್ದರೂ ಅವರು ಎಲ್ಲಿದ್ದಾರೆ ಎಂಬುದು ತಿಳಿದಿಲ್ಲವೆಂದು ಅವರ ಮನೆಯವರು ಮಾಹಿತಿ ನೀಡಿದ್ದಾರೆ. ಪರಿಸ್ಥಿತಿಯ ಗಂಭೀರತೆ ಮತ್ತು ಅವರ ಕುಟುಂಬ ಆತಂಕಕ್ಕೆ ಒಳಗಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಈ ವಿಷಯದಲ್ಲಿ ತಕ್ಷಣ ಮಧ್ಯಪ್ರವೇಶಿಸಿ ನೆರವು ನೀಡಬೇಕು’ ಎಂದೂ ಪತ್ರದಲ್ಲಿ ಅವರು ಕೋರಿದ್ದಾರೆ.
ಮಗ ನಾಪತ್ತೆ ಆಗಿರುವ ಬಗ್ಗೆ ತಂದೆ ಶ್ರೀನಿವಾಸಯ್ಯ ಅವರು ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.