ADVERTISEMENT

ಕೋವಿಡ್‌: 1 ಕೋಟಿ ಡೋಸ್ ಲಸಿಕೆ ಖರೀದಿಗೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಸಮ್ಮತಿ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 16:42 IST
Last Updated 22 ಏಪ್ರಿಲ್ 2021, 16:42 IST
ಕೋವಿಶೀಲ್ಡ್‌ ಲಸಿಕೆ–ಸಾಂದರ್ಭಿಕ ಚಿತ್ರ
ಕೋವಿಶೀಲ್ಡ್‌ ಲಸಿಕೆ–ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯ ಸರ್ಕಾರ ಮೊದಲ ಹಂತದಲ್ಲಿ ₹400 ಕೋಟಿ ವೆಚ್ಚದಲ್ಲಿ 1 ಕೋಟಿ ಡೋಸ್‌ಗಳಷ್ಟು ಕೋವಿಡ್‌ ಲಸಿಕೆ ಖರೀದಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಒಪ್ಪಿಗೆ ನೀಡಿದ್ದಾರೆ.

ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್‌ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದ್ದರಿಂದ 18 ರಿಂದ 44 ವರ್ಷ ವಯಸ್ಸಿನವರಿಗೆ ಲಸಿಕೆ ಅಭಿಯಾನ ನಡೆಸಲು ದೊಡ್ಡ ಪ್ರಮಾಣದಲ್ಲಿ ಲಸಿಕೆ ಖರೀದಿಗೆ ಸರ್ಕಾರ ಮುಂದಾಗಿದೆ.

ರಾಜ್ಯಪಾಲ ವಜುಭಾಯಿ ವಾಲಾ ಅವರು ಬುಧವಾರ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಜತೆ ವಿಡಿಯೋ ಸಂವಾದ ನಡೆಸಿ ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಲಸಿಕೆ ಹಾಕಿಸಿಕೊಳ್ಳಲು ಪ್ರೇರಣೆ ನೀಡಬೇಕು ಮತ್ತು ಇದರ ಉಸ್ತುವಾರಿ ವಹಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದರು.

ADVERTISEMENT

ರಾಜ್ಯದಲ್ಲಿ ಸುಮಾರು 6 ಲಕ್ಷಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಇದ್ದಾರೆ. ಎಲ್ಲ ವಿದ್ಯಾರ್ಥಿಗಳಿಗೂ ಕೋವಿಡ್‌ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದ್ದರು.

ಕೋವಿಶೀಲ್ಡ್‌ ಲಸಿಕೆ ಮಾತ್ರ ಮುಕ್ತ ಮಾರುಕಟ್ಟೆಯಲ್ಲಿ ಲಭ್ಯವಾಗುವುದರಿಂದ ಅದನ್ನೇ ಖರೀದಿಸಲಾಗುತ್ತಿದೆ. ಭಾರತ್‌ ಬಯೋಟೆಕ್‌ ಸಂಸ್ಥೆ ತಾನು ತಯಾರಿಸುತ್ತಿರುವ ಕೋವ್ಯಾಕ್ಸಿನ್‌ ಲಸಿಕೆಯನ್ನು ಕೇಂದ್ರ ಸರ್ಕಾರಕ್ಕೆ ಮಾತ್ರ ಪೂರೈಕೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.