
ಪ್ರಜಾವಾಣಿ ವಾರ್ತೆ
ಬೆಂಗಳೂರು: ‘ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳು ನಷ್ಟದಲ್ಲಿ ನಡೆಯುತ್ತಿದ್ದು, ಕೋವಿಡ್ ಸಂದರ್ಭದಲ್ಲಿ ಸಾವನ್ನಪ್ಪಿದವರ ಕುಟುಂಬದ ಸದಸ್ಯರಿಗೆ ಪರಿಹಾರ ಧನ ಪಾವತಿ ಮಾಡಲು ನಿಗಮಗಳ ಬಳಿ ಹಣವಿಲ್ಲ. ವೇತನ ನೀಡುವುದೇ ಕಷ್ಟವಾಗಿದೆ’ ಎಂದು ಕರ್ನಾಟಕ ಸಾರಿಗೆ ನಿಗಮಗಳ ಪರ ವಕೀಲರು ಹೈಕೋರ್ಟ್‌ಗೆ ಅರುಹಿದ್ದಾರೆ.
‘ಕೋವಿಡ್ ಸಮಯದಲ್ಲಿ ಮೃತಪಟ್ಟ ನಾಲ್ಕು ನಿಗಮಗಳ ಸಿಬ್ಬಂದಿಗೆ ತಲಾ ₹30 ಲಕ್ಷ ಪರಿಹಾರ ಬಿಡುಗಡೆ ಮಾಡಲು ನಿರ್ದೇಶಿಸಬೇಕು’ ಎಂದು ಕೋರಿ ದಾವಣಗೆರೆಯ ತಾಹಿರ್ ಹುಸೇನ್ ಮತ್ತು ರಾಯಚೂರಿನ ಅಜೀಜ್ ಪಾಷ ಜಹಗೀರ್‌ದಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಪಿ.ಉಸ್ಮಾನ್, ‘ಕೋವಿಡ್ ವೇಳೆ, ಸಾರಿಗೆ ಸಂಸ್ಥೆಯ ಉದ್ಯೋಗಿಗಳಿಂದ ಬಲವಂತವಾಗಿ ಕೆಲಸ ಮಾಡಿಸಲಾಗಿದೆ. ಆಗ ಮೃತಪಟ್ಟ ಏಳು ಮಂದಿಯ ಕುಟುಂಬಗಳಿಗೆ ತಲಾ ₹30 ಲಕ್ಷ ಪರಿಹಾರ ಪಾವತಿಸಲಾಗಿದೆ. ಅಂದು ಶಿಕ್ಷಕರು ಮುಂಚೂಣಿ ಆರೋಗ್ಯ ಕಾರ್ಯಕರ್ತರಾಗಿರಲಿಲ್ಲ. ಆದರೂ, ಅವರಿಗೆ ಯೋಜನೆ ವಿಸ್ತರಿಸಿ ಪರಿಹಾರ ಪಾವತಿಸಲಾಗಿದೆ. ಆದರೆ, ಸಾರಿಗೆ ನಿಗಮಗಳ ಸಿಬ್ಬಂದಿಗೆ ಪರಿಹಾರ ಪಾವತಿಸಲು ಮೀನಮೇಷ ಎಣಿಸಲಾಗುತ್ತಿದೆ’ ಎಂದು ಆಕ್ಷೇಪಿಸಿದರು.
ಇದಕ್ಕೆ ಪ್ರತಿಯಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪರ ವಕೀಲೆ ಎಚ್.ಆರ್.ರೇಣುಕಾ ಅವರು, ‘ನಿಗಮಗಳು ನಷ್ಟದಲ್ಲಿ ನಡೆಯುತ್ತಿದ್ದು, ಎರಡು ವರ್ಷದಿಂದ ಬಿಎಂಟಿಸಿ ಉದ್ಯೋಗಿಗಳಿಗೆ ಗ್ರ್ಯಾಚುಟಿ ಹಣ ನೀಡಿಲ್ಲ. ಶಕ್ತಿ ಯೋಜನೆಯಡಿ ಸರ್ಕಾರ ಬಿಡುಗಡೆ ಮಾಡುತ್ತಿರುವ ಹಣವನ್ನು ಗ್ರ್ಯಾಚುಟಿ ಮತ್ತಿತರ ವೆಚ್ಚಗಳಿಗೆ ವಿನಿಯೋಗಿಸಲಾಗುತ್ತಿದೆ’ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಏಳು ಕುಟುಂಬಗಳಿಗೆ ಪರಿಹಾರ ನೀಡಿ ಉಳಿದವರಿಗೆ ನೀಡದೇ ತಾರತಮ್ಯ ಮಾಡಲಾಗದು. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಬಸ್ ಸೇವೆ ಹೇಗೆ ಕೆಲಸ ಮಾಡುತ್ತಿದೆ? ಇದುವರೆಗೆ ಸರ್ಕಾರ ಎಷ್ಟು ಹಣ ಬಿಡುಗಡೆ ಮಾಡಿದೆ ಎಂಬುದರ ವಿವರವನ್ನು ಸಲ್ಲಿಸಿ’ ಎಂದು ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಮಾರ್ಚ್ 23ಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.