
ವಿಧಾನಸೌಧ
ಬೆಂಗಳೂರು: ‘ಈ ವರ್ಷಾಂತ್ಯಕ್ಕೆ 195 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಕ್ತಾಯವಾಗಲಿದೆ. ಇವುಗಳ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಲು 150 ದಿನ ಬೇಕು. ಬಳಿಕ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮತದಾರರ ಪಟ್ಟಿ ಸಿದ್ಧಪಡಿಸಿಕೊಳ್ಳಲು ರಾಜ್ಯ ಚುನಾವಣಾ ಆಯೋಗಕ್ಕೆ 60 ದಿನಗಳ ಕಾಲಾವಕಾಶ ಬೇಕು...’
‘ಅವಧಿ ಮುಗಿಯಲಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡುವ ಕ್ರಮಕ್ಕೆ ಮುಂದಾಗದಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ, ಈ ಸಂಸ್ಥೆಗಳ ಚುನಾಯಿತ ಸದಸ್ಯರು ಪ್ರತ್ಯೇಕವಾಗಿ ಸಲ್ಲಿಸಿರುವ 75 ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಈ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು ನ್ಯಾಯಪೀಠಕ್ಕೆ ಅರುಹಿದ ಅಂಶಗಳಿವು.
‘ಈ ವರ್ಷ ಅವಧಿ ಮುಕ್ತಾಯಗೊಳ್ಳಲಿರುವ ಸ್ಥಳೀಯ ಸಂಸ್ಥೆಗಳ ಪೈಕಿ 50 ನಗರ ಸ್ಥಳೀಯ ಸಂಸ್ಥೆಗಳಿಗೆ ಮುಂದಿನ 15 ದಿನಗಳಲ್ಲಿ ವಾರ್ಡ್ ವಾರು ಮೀಸಲಾತಿ ನಿಗದಿಪಡಿಸಿ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು. ಉಳಿದ 145 ನಗರ ಸ್ಥಳೀಯ ಸಂಸ್ಥೆಗಳಿಗೆ ಆಯಾ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಲು 150 ದಿನಗಳೊಳಗಾಗಿ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲಾಗುವುದು’ ಎಂದು ತಿಳಿಸಿದರು.
ಆಡಳಿತಾಧಿಕಾರಿ ನೇಮಕ: ‘2025ರ ಅಕ್ಟೋಬರ್ 18ರಿಂದ ನವೆಂಬರ್ 6ರವರೆಗೆ ಐದು ವರ್ಷದ ಅಧಿಕಾರಾವಧಿ ಮುಕ್ತಾಯಗೊಂಡಿರುವ 42 ನಗರಸಭೆ, 53 ಪುರಸಭೆ ಹಾಗೂ 23 ಪಟ್ಟಣ ಪಂಚಾಯತಿಗಳೂ ಸೇರಿದಂತೆ ಒಟ್ಟು 118 ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡಿ ನವೆಂಬರ್ 6ಕ್ಕೆ ಅಧಿಸೂಚನೆ ಹೊರಡಿಸಲಾಗಿದೆ’ ಎಂದು ಪ್ರತಿಮಾ ಇದೇ ವೇಳೆ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.
ಇದೇ ವೇಳೆ ಅರ್ಜಿದಾರರ ಪರ ವಕೀಲರು, ‘ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಲಾಗುವುದು. ಅದಕ್ಕಾಗಿ ಮೂಲ ಅರ್ಜಿ ತಿದ್ದುಪಡಿಗೆ ಅವಕಾಶ ನೀಡಬೇಕು’ ಎಂದು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.