ADVERTISEMENT

ಸಚಿವೆ ಹೆಬ್ಬಾಳಕರ ಅವರಿಗೆ ಅವಮಾನ: ಉನ್ನತಮಟ್ಟದ ತನಿಖೆಗೆ ಮಹಿಳಾ ಆಯೋಗ ಮನವಿ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2024, 14:30 IST
Last Updated 21 ಡಿಸೆಂಬರ್ 2024, 14:30 IST
ನಾಗಲಕ್ಷ್ಮೀ ಚೌಧರಿ
ನಾಗಲಕ್ಷ್ಮೀ ಚೌಧರಿ   

ಬೆಂಗಳೂರು: ‘ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಅವಾಚ್ಯ ಮತ್ತು ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿರುವ ಪರಿಷತ್ತಿನ ಸದಸ್ಯರಾದ  ಸಿ.ಟಿ. ರವಿ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಬೇಕು’ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಪತ್ರ ಬರೆದಿದ್ದಾರೆ.

‘ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಸಿ.ಟಿ. ರವಿ ಅಪಮಾನಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಮಾಜಿ ಸಚಿವರಾಗಿ, ಹೆಣ್ಣು ಮಕ್ಕಳ ಬಗ್ಗೆ ಅಪಾರ ಕಾಳಜಿ, ಗೌರವ ಹೊಂದಿರಬೇಕಾದ, ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿಯೇ ಸದನದಲ್ಲಿ ಮಹಿಳಾ ಮಂತ್ರಿಯೊಬ್ಬರ ವಿರುದ್ಧ ಅತೀ ಕೀಳುಮಟ್ಟದ ಅಸಾಂವಿಧಾನಿಕ ಪದ ಪ್ರಯೋಗ ಮಾಡಿದ್ದಾರೆ. ಇದು ನಾಡಿನ ಹೆಣ್ಣು ಕುಲಕ್ಕೆ, ಅವರ ಭಾವನೆಗಳಿಗೆ, ಘನತೆಗೆ ಉಂಟು ಮಾಡಿರುವ ಅಪಮಾನವಾಗಿದೆ. ನೀವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು’ ಎಂದು ಪತ್ರದಲ್ಲಿ ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT