ADVERTISEMENT

ಕೋವಿಡ್ ಇಳಿಕೆ: ಕಸಾಪ ಚುನಾವಣೆಗೆ ಅಭ್ಯರ್ಥಿಗಳ ಆಗ್ರಹ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 16:16 IST
Last Updated 23 ಜುಲೈ 2021, 16:16 IST

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿರುವುದರಿಂದ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷರ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ನಡೆಸಬೇಕು ಎಂದು ಆಕಾಂಕ್ಷಿಗಳು ಒತ್ತಾಯಿಸಿದ್ದಾರೆ.

ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಪರಿಷತ್ತಿನ ಚುನಾವಣೆ ಕಳೆದ ಮೇ 9ರಂದು ಈ ಹಿಂದೆ ನಿಗದಿಯಾಗಿತ್ತು. ನಾಮಪತ್ರ ಪರಿಶೀಲನೆ ಸೇರಿದಂತೆ ವಿವಿಧ ಪ್ರಕ್ರಿಯೆಗಳು ಪೂರ್ಣಗೊಂಡು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಂತಿಮವಾಗಿ 21 ಮಂದಿ ಸ್ಪರ್ಧೆಯಲ್ಲಿದ್ದರು. ರಾಜ್ಯದ ಉದ್ದಗಲಕ್ಕೂ ಸಂಚರಿಸಿ, ಪ್ರಚಾರ ಕಾರ್ಯವನ್ನು ಅವರು ನಡೆಸಿದ್ದರು. ಆದರೆ, ಮಾರ್ಚ್‌ ಮೂರನೇ ವಾರದ ಬಳಿಕ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿ ಪಡೆದು, ಏಪ್ರಿಲ್ ತಿಂಗಳಲ್ಲಿ ಗರಿಷ್ಠ ಸಂಖ್ಯೆಗೆ ತಲುಪಿದ ಕಾರಣ ಚುನಾವಣೆಯನ್ನು ಸರ್ಕಾರ ಮುಂದೂಡಿತ್ತು.

ಚುನಾವಣಾ ಪ್ರಕ್ರಿಯೆಯನ್ನು ಮುಂದೂಡಿದ ಹಂತದಿಂದ ಯಥಾವತ್ತಾಗಿ ಮುಂದುವರಿಸಲಾಗುವುದು ಎಂದು ಕಳೆದ ಏಪ್ರಿಲ್ 26ರಂದು ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿತ್ತು.

ADVERTISEMENT

ಕಳೆದ ಒಂದು ತಿಂಗಳಿನಿಂದ ಕೋವಿಡ್ ಹೊಸ ಪ್ರಕರಣಗಳು ಇಳಿಕೆ ಕಂಡಿದ್ದು, ಸರ್ಕಾರವು ನಿರ್ಬಂಧಗಳನ್ನು ವಿವಿಧ ಹಂತಗಳಲ್ಲಿ ಸಡಿಲಿಸಿದೆ. ಹೀಗಾಗಿ, ಚುನಾವಣೆ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಆಗ್ರಹಿಸಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದು, ಚುನಾವಣೆ ನಡೆಸಲು ಅವಕಾಶ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಅಧಿಕಾರದ ಅವಧಿ ಅಂತ್ಯ: ಹಾಲಿ ಕಾರ್ಯಕಾರಿ ಸಮಿತಿಯ ಅಧಿಕಾರದ ಅವಧಿ 5 ವರ್ಷ ಮುಕ್ತಾಯವಾಗಿದ್ದು, ಪರಿಷತ್ತಿನ ಬೈಲಾದ ಅನುಸಾರ 6 ತಿಂಗಳು ಅಧಿಕಾರ ಅವಧಿ ವಿಸ್ತರಿಸಿಕೊಳ್ಳಲಾಗಿದೆ. ಅಂದರೇ, ಮುಂಬರುವ ಸೆ.2ಕ್ಕೆ ಅಧಿಕಾರ ಅವಧಿ ಕೊನೆಗೊಳ್ಳಲಿದೆ.

‘ಕೋವಿಡ್‌ನಿಂದಾಗಿ ಮುಂದೂಡಲ್ಪಟ್ಟಿದ್ದ ಚುನಾವಣೆಯನ್ನು ಈಗ ನಡೆಸಲು ಸರ್ಕಾರ ಅವಕಾಶ ನೀಡಬೇಕಿದೆ. ಈಗಾಗಲೇ ವಿವಿಧ ನಿರ್ಬಂಧಗಳನ್ನು ಸಡಿಲಿಸಿ, ಸಾರ್ವಜನಿಕ ಸಾರಿಗೆಗಳಲ್ಲಿ ಪೂರ್ಣ ಪ್ರಮಾಣದ ಆಸನಗಳ ಭರ್ತಿ, ಚಿತ್ರಮಂದಿರಗಳ ಪುನರಾರಂಭ ಸೇರಿದಂತೆ ವಿವಿಧ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಶಾಲೆ–ಕಾಲೇಜುಗಳನ್ನು ಕೂಡ ‍ಪ್ರಾರಂಭಿಸಲಾಗುತ್ತಿದೆ. ಕೋವಿಡ್ ಲಸಿಕೆಯೂ ಲಭ್ಯವಿದ್ದು, ಸೋಂಕು ದೃಢ ಪ್ರಮಾಣ ನಿಯಂತ್ರಣಕ್ಕೆ ಬಂದಿದೆ. ಹಾಗಾಗಿ, ಚುನಾವಣೆ ನಡೆಸಬೇಕು’ ಎಂದು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಆಗ್ರಹಿಸಿದ್ದಾರೆ.

‘ಪರಿಷತ್ತಿನ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಅವಕಾಶ ನೀಡಿದಲ್ಲಿ ಚುನಾವಣೆ ನಡೆಸಲು ಯಾವುದೇ ಸಮಸ್ಯೆಯಿಲ್ಲ’ ಎಂದು ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.