ಬೆಂಗಳೂರು: ಪ್ರೌಢಶಾಲಾ ಮಕ್ಕಳಿಗೆ ಖಾನ್‌ಮಿಗೋ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಒದಗಿಸಲಾಗುತ್ತಿದ್ದು, ಪಾಠಗಳ ಯೋಜನೆ, ಪ್ರಶ್ನೆ ಪತ್ರಿಕೆ ಮತ್ತು ರಸಪ್ರಶ್ನೆಗಳನ್ನು ಸಿದ್ಧಪಡಿಸಲು ನೆರವಾಗಲಿದೆ.
2025-26ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ ‘ಜ್ಞಾನಸೇತು’ ಕಾರ್ಯಕ್ರಮದ ಭಾಗವಾಗಿ ಶಾಲಾ ಶಿಕ್ಷಣ ಇಲಾಖೆ ಖಾನ್ ಅಕಾಡೆಮಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಪ್ರೌಢಶಾಲೆ, ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಹಾಗೂ 6ರಿಂದ 10ನೇ ತರಗತಿಗಳಿಗೆ ಪಾಠ ಮಾಡುವ ಸರ್ಕಾರಿ ಶಾಲೆ ಶಿಕ್ಷಕರು, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಈ ತಂತ್ರಜ್ಞಾನವನ್ನು ಉಚಿತವಾಗಿ ನೀಡಲಾಗುತ್ತಿದೆ.
‘ಜ್ಞಾನಸೇತು’ ಕಾರ್ಯಕ್ರಮ ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ 6ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಡಿಜಿಟಲ್ ಕಲಿಕೆಯನ್ನು ಉತ್ತೇಜಿಸುತ್ತದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ವಿದ್ಯಾರ್ಥಿಗಳಿಗೆ ಎನ್‌ಸಿಇಆರ್‌ಟಿ ಪಠ್ಯಕ್ರಮವನ್ನು ಸ್ವಯಂ ಅಧ್ಯಯನ ಮಾಡಲು ಅವಕಾಶ ಒದಗಿಸುತ್ತದೆ. ಕಲಿಕೆಯಲ್ಲಿ ಉತ್ತಮ ಪ್ರಗತಿ ಹೊಂದಲು ಸಹಾಯ ಮಾಡುತ್ತದೆ.
ವಾರದ ಪ್ರತಿ ಶನಿವಾರ ಒಂದು ಬೋಧನಾ ಅವಧಿಯನ್ನು ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಕಲೆ ಮತ್ತು ಗಣಿತ ವಿಷಯಗಳಿಗೆ ಖಾನ್ ಅಕಾಡೆಮಿ ನಿಗದಿ ಮಾಡಿದೆ. 2025-26ನೇ ಸಾಲಿನಲ್ಲಿ 21,726 ಸರ್ಕಾರಿ ಪ್ರಾಥಮಿಕ ಶಾಲೆ, 4,871 ಸರ್ಕಾರಿ ಪ್ರೌಢಶಾಲೆ ಹಾಗೂ 1,229 ಸರ್ಕಾರಿ ಪದವಿಪೂರ್ವ ಕಾಲೇಜುಗಳ 19 ಲಕ್ಷ ವಿದ್ಯಾರ್ಥಿಗಳಿಗೆ ಪ್ರಯೋಜನ ದೊರೆಯಲಿದೆ. ಕಾರ್ಯಕ್ರಮ ಅನುಷ್ಠಾನಗೊಳಿಸಲು ಅಕಾಡೆಮಿಗೆ ಶಾಲಾ ಶಿಕ್ಷಣ ಇಲಾಖೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.