ADVERTISEMENT

ಸ್ಮಾರ್ಟ್‌ ಮೀಟರ್‌: ಸಚಿವ ಕೆ.ಜೆ. ಜಾರ್ಜ್‌ ವಿರುದ್ಧ ಪಿಸಿಆರ್ ದಾಖಲಿಸಲು ಆದೇಶ

​ಪ್ರಜಾವಾಣಿ ವಾರ್ತೆ
Published 27 ಜುಲೈ 2025, 0:54 IST
Last Updated 27 ಜುಲೈ 2025, 0:54 IST
ಕೆ.ಜೆ.ಜಾರ್ಜ್‌
ಕೆ.ಜೆ.ಜಾರ್ಜ್‌   

ಬೆಂಗಳೂರು: ‘ರಾಜ್ಯದಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ ಸಂಪೂರ್ಣ ಕಾನೂನು ಬಾಹಿರವಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ಅಧ್ಯಕ್ಷರೂ ಆದ ಇಂಧನ ಸಚಿವ ಕೆ.ಜೆ.ಜಾರ್ಜ್‌ ವಿರುದ್ಧ ಪಿಸಿಆರ್ (ಖಾಸಗಿ ದೂರಿನ ಆಧಾರದಡಿ ಕ್ರಿಮಿನಲ್ ಪ್ರಕರಣ ದಾಖಲು ಮಾಡಿಕೊಳ್ಳುವುದು) ದಾಖಲಿಸಿಕೊಳ್ಳಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರಿನ ವಿಚಾರಣೆ ನಡೆಸುತ್ತಿರುವ ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಈ ಕುರಿತಂತೆ ಆದೇಶಿಸಿದ್ದಾರೆ.

‘ಆರೋಪಿಗಳ ವಿರುದ್ಧದ ದೂರಿನ ಕುರಿತಾದ ವಸ್ತುಸ್ಥಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ’ ಎಂದು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿರುವ ನ್ಯಾಯಾಧೀಶರು ವಿಚಾರಣೆಯನ್ನು ಆಗಸ್ಟ್ 11ಕ್ಕೆ ಮುಂದೂಡಿದ್ದಾರೆ.

ADVERTISEMENT

ದೂರಿನಲ್ಲಿ ಸಚಿವ ಕೆ.ಜೆ.ಜಾರ್ಜ್‌, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಬೆಸ್ಕಾಂ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಎಚ್‌.ಜೆ.ರಮೇಶ್‌ ಅವರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ.

ಬಿಜೆಪಿಯ ಶಾಸಕ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಶಾಸಕರಾದ ಎಸ್.ಆರ್.ವಿಶ್ವನಾಥ್ ಹಾಗೂ ಧೀರಜ್ ಮುನಿರಾಜು ಈ ಖಾಸಗಿ ದೂರು ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.