ADVERTISEMENT

ಹಾಲಿನ ದರ ಲೀಟರ್‌ಗೆ ₹3 ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ ಕೆಎಂಎಫ್‌

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2022, 19:45 IST
Last Updated 29 ಆಗಸ್ಟ್ 2022, 19:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹3 ರಂತೆ ಹೆಚ್ಚಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌) ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.

‘ಖಾಸಗಿಯಾಗಿ ಮಾರಾಟ ಮಾಡುವ ಹಾಲಿನ ದರಕ್ಕೆ ಹೋಲಿಸಿದರೆ ಕೆಎಂಎಫ್‌ ಹಾಲಿನ ದರ ಕಡಿಮೆ. ಹೀಗಾಗಿ, ದರ ಹೆಚ್ಚಿಸುವಂತೆ ಕೋರಲಾಗಿದೆ’ ಎಂದು ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್‌ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ದರ ಹೆಚ್ಚಳದ ಬಗ್ಗೆ ಮುಖ್ಯಮಂತ್ರಿ ಅವರ ಜತೆ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಚರ್ಚಿಸಿದ್ದಾರೆ. ಏರಿಕೆ ದರದ ಮೊತ್ತವನ್ನು ರೈತರಿಗೆ ವರ್ಗಾಯಿಸುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಅವರು ಈ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ವಿವರಿಸಿದರು.

ADVERTISEMENT

‘ಕೆಎಂಎಫ್‌ ಒಂದು ಲೀಟರ್‌ ಹಾಲನ್ನು ₹37ಕ್ಕೆ ಮಾರಾಟ ಮಾಡುತ್ತಿದೆ. ಆದರೆ, ಖಾಸಗಿಯವರು ₹40ಕ್ಕೂ ಹೆಚ್ಚು ದರದಲ್ಲಿ ಮಾರಾಟ ಮಾಡುತ್ತಿದ್ದಾರೆ’ ಎಂದು ತಿಳಿಸಿದರು.

‘ರೈತರ ಪ್ರೋತ್ಸಾಹ ಧನದ ಎರಡನೇ ಕಂತು ₹1,250 ಕೋಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಮೂರನೇ ಕಂತು ಶೀಘ್ರ ಬಿಡುಗಡೆಯಾಗಲಿದೆ. ನೇರವಾಗಿ ರೈತರ ಖಾತೆಗಳಿಗೆ ಹಣ ವರ್ಗಾವಣೆ ಆಗಲಿದೆ. 2019–20ರ ಬಾಕಿ ಪ್ರೋತ್ಸಾಹ ಧನವನ್ನೂ ಬಿಡುಗಡೆ ಮಾಡಲಾಗಿದೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.