ADVERTISEMENT

ಕೆಪಿಸಿಸಿ ಹುದ್ದೆ ಅಂಗಡಿಯಲ್ಲಿ ಸಿಗದು: ಡಿ.ಕೆ. ಶಿವಕುಮಾರ್

ಎಐಸಿಸಿ ಅಧ್ಯಕ್ಷರ ನಿರ್ಧಾರವನ್ನೇ ಪ್ರಶ್ನೆ ಮಾಡಲಾಗುತ್ತಿದೆ–ಡಿಸಿಎಂ ಅತೃಪ್ತಿ

​ಪ್ರಜಾವಾಣಿ ವಾರ್ತೆ
Published 16 ಜನವರಿ 2025, 16:09 IST
Last Updated 16 ಜನವರಿ 2025, 16:09 IST
<div class="paragraphs"><p>ಡಿಕೆಶಿ </p></div>

ಡಿಕೆಶಿ

   

ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರನ್ನು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಇತ್ತೀಚೆಗೆ ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿ.ಕೆ. ಶಿವಕುಮಾರ್ ಅವರನ್ನು ಬದಲಿಸುವಂತೆ ಆಗ್ರಹಿಸಿದ್ದರು.

ADVERTISEMENT

ಜಾರಕಿಹೊಳಿ ಬೇಡಿಕೆಯ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ನಾವು ಮಾಡುವ ಕೆಲಸವನ್ನು ಗುರುತಿಸಿ ಪಕ್ಷದ ನಾಯಕರು ಸೂಕ್ತ ಹುದ್ದೆ ನೀಡುತ್ತಾರೆ. ಮಾಧ್ಯಮಗಳ ಮುಖಾಂತರ ಯಾರಾದರೂ ಹುದ್ದೆ ಕೇಳುತ್ತಾರೆಯೇ’ ಎಂದು ಪ್ರಶ್ನಿಸಿದರು.

‘ಪಕ್ಷದ ಸಂಘಟನೆ ಕುಂಠಿತವಾಗಿದೆ. ಪಕ್ಷಕ್ಕೆ ಪೂರ್ಣ ಪ್ರಮಾಣದ ಅಧ್ಯಕ್ಷರು ಬೇಕು’ ಎಂಬ ಸತೀಶ ಜಾರಕಿಹೊಳಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ಬಗ್ಗೆ ಸ್ಪಷ್ಟನೆ ನೀಡಬೇಕಿರುವುದು ನಾನಲ್ಲ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ. ಅವರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದೆ’ ಎಂದರು.

‘ಪಕ್ಷದ ವಿಚಾರವಾಗಿ ಯಾವುದೇ ಬೆಳವಣಿಗೆ ಇದ್ದರೂ ಮಾಧ್ಯಮಗೋಷ್ಠಿ ಕರೆದು ನಾನು ಮಾಹಿತಿ ನೀಡುತ್ತೇನೆ. ಈಗ ನಮ್ಮ ಪಕ್ಷವನ್ನು ಸಂಘಟಿಸಿ, ಉಳಿಸಿ, ಬೆಳೆಸುವ ಕೆಲಸ ಮಾಡಬೇಕು. ಪಕ್ಷದಲ್ಲಿ ಎಲ್ಲರೂ ಶಿಸ್ತು ಕಾಪಾಡಬೇಕು, ಬಹಿರಂಗವಾಗಿ ಚರ್ಚೆ ಮಾಡಬಾರದು ಎಂದು ಮುಖ್ಯಮಂತ್ರಿ ಮತ್ತು ಪಕ್ಷದ ಉಸ್ತುವಾರಿ ಬುದ್ಧಿವಾದ ಹೇಳಿದ್ದಾರೆ’ ಎಂದರು.

‘ಪಕ್ಷದ ವಿಚಾರ ಮಾಧ್ಯಮಗಳ ಮುಂದೆ ಮಾತನಾಡುವಂಥದ್ದಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿ ಅಥವಾ ನನ್ನ ಬಳಿ ಬಂದು ಮಾತನಾಡಲಿ. ನಾನು ಯಾವುದಾದರೂ ಹುದ್ದೆ ಬಯಸಿದರೆ ನೀವು (ಮಾಧ್ಯಮಗಳು) ಆ ಸ್ಥಾನ ನನಗೆ ಕೊಡಿಸುತ್ತೀರಾ? ಅಥವಾ ಈ ಹುದ್ದೆಗಳು ಅಂಗಡಿಯಲ್ಲಿ ಸಿಗುತ್ತದೆಯೇ? ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ. ಬದಲಿಗೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ’ ಎಂದರು.

ಯಾರೇ ಇರಲಿ, ಹೋಗಲಿ ಪಕ್ಷ ಇರುತ್ತದೆ: ‘ಕಾಂಗ್ರೆಸ್ ಪಕ್ಷವನ್ನು ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿಲ್ಲ. ಕಾರ್ಯಕರ್ತರು, ಮತದಾರರು ನಮ್ಮ ಮೇಲೆ ಅಪಾರವಾದ ವಿಶ್ವಾಸ ಇಟ್ಟು ಅಧಿಕಾರ ನೀಡಿದ್ದಾರೆ. ಇದನ್ನು ಉಳಿಸಿಕೊಳ್ಳಬೇಕು, ಉಳಿಸಿಕೊಳ್ಳುತ್ತೇವೆ. ಯಾರೇ ಇರಲಿ, ಹೋಗಲಿ ತನ್ನನ್ನು ತಾನು ಉಳಿಸಿಕೊಳ್ಳುವ ಶಕ್ತಿ ಈ ಪಕ್ಷಕ್ಕಿದೆ’ ಎಂದರು.

ಬದಲಾವಣೆ ಹೇಳಿಕೆ ಸಹಜ: ಪರಮೇಶ್ವರ

‘ಡಿ.ಕೆ. ಶಿವಕುಮಾರ್ ಬಳಿ ಎರಡು ಪ್ರಮುಖ ಖಾತೆಗಳಿವೆ. ಪಕ್ಷದ ಅಧ್ಯಕ್ಷ ಸ್ಥಾನವೂ ಇದೆ. ಹೀಗಾಗಿ ಕಾರ್ಯಭಾರ ಹೆಚ್ಚಿರುತ್ತದೆ. ಬದಲಾವಣೆ ಮಾಡಿ ಎಂಬ ಹೇಳಿಕೆ ಸಹಜ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಲೋಕಸಭಾ ಚುನಾವಣೆವರೆಗೆ ಡಿ.ಕೆ. ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ಮುಂದುವರಿಸುವುದಾಗಿ ಎಐಸಿಸಿ ನಾಯಕರು ಮುಖ್ಯಮಂತ್ರಿ ಆಯ್ಕೆ ಸಂದರ್ಭದಲ್ಲಿ ಹೇಳಿದ್ದರು. ಇದನ್ನು ನೆನಪಿಸಲು ಸುರ್ಜೇವಾಲಾ ಅವರನ್ನು ಭೇಟಿ ಮಾಡಿರುವುದಾಗಿ ಸತೀಶ ಹೇಳಿದ್ದಾರೆ’ ಎಂದರು.

ನಾನು ಹೇಳಿದ್ದೇ ಬೇರೆ, ವರದಿ ಆಗಿರುವುದೇ ಬೇರೆ. ಮಾಧ್ಯಮಗಳ ನಡೆಯಿಂದ ನನಗೂ ಪಕ್ಷಕ್ಕೂ ಹಾನಿಯಾಗುತ್ತದೆ. ನೋಟಿಸ್‌ ನೀಡಿದರೆ ಉತ್ತರ ಕೊಡುತ್ತೇನೆ
ಸತೀಶ ಜಾರಕಿಹೊಳಿ, ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.