ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಕಂಡು ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಈ ಸಂದರ್ಭ ಚರ್ಚಿಸಿದ್ದಾಗಿ ಅವರು ಭೇಟಿಯ ನಂತರ ಸುದ್ದಿಗಾರರಿಗೆ ತಿಳಿಸಿದರು.
ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರಾಗಬೇಕು ಎಂಬ ಕುರಿತು ಪಕ್ಷದ ಶಾಸಕರು ಹೇಳಿಕೆ ನೀಡುತ್ತಿರುವ ಬಗ್ಗೆ ರಾಹುಲ್ ಜೊತೆ ಚರ್ಚಿಸಲಾಗಿದೆಯಾ ಎಂಬ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಲಿಲ್ಲ.
ಭೇಟಿಯ ವೇಳೆ ನಡೆದ ಮಾತುಕತೆಯ ವಿವರ ನೀಡಲು ಸಾಧ್ಯವಿಲ್ಲ. ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಪಕ್ಷದ ಸ್ಥಿತಿಗತಿಕುರಿತು ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.