ADVERTISEMENT

ಸಿದ್ದರಾಮೋತ್ಸವ ಆಚರಣೆ ತಪ್ಪಲ್ಲ: ಡಿ.ಕೆ. ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 19:40 IST
Last Updated 3 ಜುಲೈ 2022, 19:40 IST
ಡಿ.ಕೆ. ಶಿವಕುಮಾರ್‌
ಡಿ.ಕೆ. ಶಿವಕುಮಾರ್‌   

ಬೆಂಗಳೂರು: ‌‘ನನಗೆ ವ್ಯಕ್ತಿ ಮುಖ್ಯವಲ್ಲ. ಪಕ್ಷ ಮುಖ್ಯ. ಪಕ್ಷ ಇದ್ದರೆ ಮಾತ್ರ ನಾವು. ಇದನ್ನೇ ನಾನು ಮೊದಲಿಂದಲೂ ಪ್ರತಿಪಾದಿಸುತ್ತಿದ್ದೇನೆ. ಪಕ್ಷದ ಕಾರ್ಯಕರ್ತರಿಗೂ ಇದನ್ನೇ ಹೇಳುತ್ತಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

‘ಸಿದ್ದರಾಮೋತ್ಸವ ಕಾರ್ಯಕ್ರಮದ ನಂತರ ಕಾಂಗ್ರೆಸ್ ಖಾಲಿ ಆಗಲಿದೆ’ ಎಂಬ ಬಿಜೆಪಿ ಟ್ವೀಟ್ ಕುರಿತು ಕೇಳಿದ ಪ್ರಶ್ನೆಗೆ, ‘ಬೇರೆಯವರು ಏನಾದರೂ ಹೇಳಲಿ. ನಮ್ಮ ಪಕ್ಷದ ನಾಯಕರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಾರೆ. ನಾನು ಕೇದಾರನಾಥಕ್ಕೆ ಕುಟುಂಬ ಸಮೇತ ಹೋಗಿ ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಬೇಕಿತ್ತು. ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಆಚರಿಸಲು ಅವರ ಅಭಿಮಾನಿಗಳು ಬಯಸುತ್ತಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ' ಎಂದರು.

‘ಇದು ಶಕ್ತಿ ಪ್ರದರ್ಶನ ಅಲ್ಲವೇ’ ಎಂದು ಕೇಳಿದ ಪ್ರಶ್ನೆಗೆ, ‘ನಮ್ಮ ಪಕ್ಷಕ್ಕೆ ಏನೆಲ್ಲಾ ಅನುಕೂಲವಾಗುತ್ತದೆಯೋ ಅದನ್ನೆಲ್ಲ ಮಾಡೋಣ. ಇನ್ನು ಖರ್ಗೆ ಅವರು ಶಾಸಕರಾಗಿ 50 ವರ್ಷ ಆಗಿದೆ. ಆ ಕಾರ್ಯಕ್ರಮ ಮಾಡಬೇಕು ಎಂದು ಅವರ ಅಭಿಮಾನಿಗಳು ಕೇಳುತ್ತಾರೆ. ಪರಮೇಶ್ವರ್ ಅವರ ಅಭಿಮಾನಿಗಳು ಬಂದು ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮಾಡಬೇಕು ಎಂದು ಕೇಳುತ್ತಾರೆ. ಒಬ್ಬೊಬ್ಬರದ್ದು ಒಂದೊಂದು ಆಸೆ ಇರುತ್ತದೆ. ಅದನ್ನು ತಪ್ಪು ಎಂದು ಹೇಳಲು ಸಾಧ್ಯವೇ? ಏನೇ ಸಂಘಟನೆ ಆದರೂ ಅದರಿಂದ ಪಕ್ಷಕ್ಕೆ ಒಳ್ಳೆಯದಾದರೆ ಸಾಕು’ ಎಂದರು.

ADVERTISEMENT

‘ಮುಂಬರುವ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಬೇಕು ಎಂದು ರಾಹುಲ್ ಗಾಂಧಿ ಹಾಗೂ ಪಕ್ಷದ ವರಿಷ್ಠರು ತೀರ್ಮಾನಿಸಿದ್ದಾರೆ' ಎಂದರು.

‘ತಪ್ಪಲ್ಲ, ಗುಂಪುಗಾರಿಕೆ ಇಲ್ಲ’:‘ವ್ಯಕ್ತಿ 75 ವರ್ಷ ಪೂರೈಸುವುದು ಸುಲಭವಲ್ಲ. ಹೀಗಾಗಿ ಸಿದ್ದರಾಮಯ್ಯ ಅವರ ಅಭಿಮಾನಿಗಳು ಅವರ ಹೆಸರಿನಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಿರುವುದು ತಪ್ಪಲ್ಲ’ ಎಂದು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಹೇಳಿದರು.

ಸಿದ್ದರಾಮೋತ್ಸವ ಕಾರ್ಯಕ್ರಮ ಆಯೋಜನೆ ಕುರಿತು ಭಾನುವಾರ ರಾಮನಗರದಲ್ಲಿ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಇಲ್ಲ. ಮೊದಲು ಪಕ್ಷ ಅಧಿಕಾರಕ್ಕೆ ಬರಬೇಕು. ಚುನಾವಣೆಯನ್ನು ಕಾಂಗ್ರೆಸ್‌ ಸಾಮೂಹಿಕ ನಾಯಕತ್ವದೊಂದಿಗೆ ಎದುರಿಸಲಿದೆ’ ಎಂದರು.

‘ದಲಿತ ಮುಖ್ಯಮಂತ್ರಿ ಆಯ್ಕೆ ಪಕ್ಷಕ್ಕೆ ಬಿಟ್ಟ ವಿಚಾರ. ಸದ್ಯ ಪಕ್ಷ ಅಧಿಕಾರಕ್ಕೆ ಬರುವುದು ಮುಖ್ಯ. ನಂತರವಷ್ಟೇ ಮುಖ್ಯಮಂತ್ರಿ ಯಾರೆಂದು ಪಕ್ಷ ತೀರ್ಮಾನ ಮಾಡುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.