ADVERTISEMENT

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಎಚ್‌.ಕೆ.ಪಾಟೀಲ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 24 ಮೇ 2019, 19:13 IST
Last Updated 24 ಮೇ 2019, 19:13 IST
   

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಆಗಿರುವ ಸೋಲಿನ ನೈತಿಕ ಹೊಣೆ ಹೊತ್ತು ಪ್ರದೇಶ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಎಚ್‌.ಕೆ.ಪಾಟೀಲ ರಾಜೀನಾಮೆ ನೀಡಿದ್ದಾರೆ.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಕಳುಹಿಸುವುದಾಗಿ ಹೇಳಿದರು.

‘ಚುನಾವಣಾ ಫಲಿತಾಂಶದ ಪರಿಣಾಮ ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿನ ಪಕ್ಷಗಳ ಹೊಂದಾಣಿಕೆಯ ಮೇಲೂ ಆಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಎರಡೂ ಪಕ್ಷಗಳ ಮುಖಂಡರ ನಡವಳಿಕೆ ಬಹಳ ಮುಖ್ಯವಾಗುತ್ತದೆ. ಸರ್ಕಾರ ಅಭದ್ರಗೊಳಿಸಲು ಬಿಜೆಪಿ ಆರು ತಿಂಗಳಿಂದ ಯತ್ನಿಸುತ್ತಿದೆ’ ಎಂದು ಹೇಳಿದರು.

ADVERTISEMENT

‘ರಾಜ್ಯದ ಒಂದೆರಡು ಕ್ಷೇತ್ರಗಳಲ್ಲಿ ಬಿಟ್ಟರೆ ಉಳಿದ ಕಡೆ ಮೈತ್ರಿಯಿಂದ ಕಾಂಗ್ರೆಸ್‌ಗೆ ತೊಂದರೆ ಆಗಿಲ್ಲ. ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ. ತಪ್ಪುಗಳನ್ನು ಸರಿಪಡಿಸಿಕೊಂಡು ಪಕ್ಷ ಸಂಘಟನೆಯನ್ನು ಬಲಪಡಿಸುವ ಕೆಲಸ ಮಾಡುತ್ತೇವೆ’ ಎಂದರು.

‘ಬಿಜೆಪಿಯು ಹಣ, ಮಾಧ್ಯಮ ಹಾಗೂ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದೆ. ಈ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ. ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಸುಳ್ಳು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸಲಾಯಿತು’ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.