ADVERTISEMENT

ಕಾನೂನು ಅಭಿಪ್ರಾಯ ಕೋರಿದ ಸರ್ಕಾರ

ಕೆಪಿಎಸ್‌ಸಿ: 1998, 1999, 2004ರ ನೇಮಕಾತಿ ಪ್ರಕರಣ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2019, 19:35 IST
Last Updated 1 ಫೆಬ್ರುವರಿ 2019, 19:35 IST

ಬೆಂಗಳೂರು: 1998, 1999, 2004ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆಯ ಅಧಿಕಾರಿಗಳು ಅಭಿಪ್ರಾಯ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ಸೂಚಿಸಿದರು.

ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳ ಕುರಿತಾಗಿ ಚರ್ಚಿಸಲು ವಿಧಾನಸೌಧದಲ್ಲಿ ಶುಕ್ರವಾರ ನಡೆದ ಉನ್ನತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

1998, 1999 ಮತ್ತು 2004ರಲ್ಲಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ್ದ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕುರಿತು 2016ರ ಜೂನ್‌ 12ರಂದು ತೀರ್ಪು ನೀಡಿರುವ ಹೈಕೋರ್ಟ್‌, ‘ಈ ಪ್ರಕ್ರಿಯೆಯೇ ಅಸಾಂವಿಧಾನಿಕ. ಸರ್ಕಾರದ ಆದೇಶಗಳು ಮತ್ತು ನಿಯಮಗಳಿಗೆ ವಿರುದ್ಧವಾಗಿದೆ’ ಎಂದು ಹೇಳಿತ್ತು. ಅನರ್ಹರನ್ನು ಕೈಬಿಟ್ಟು ಅರ್ಹರನ್ನು ನೇಮಿಸುವಂತೆ ಹೇಳಿತ್ತು. ಈ ತೀರ್ಪನ್ನು ಸುಪ್ರೀಂ ಕೋರ್ಟ್ 2018ರ ಏ. 11ರಂದು ಎತ್ತಿ ಹಿಡಿದಿತ್ತು.

ADVERTISEMENT

‘ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದಾಗಲೇ ನೇಮಕಾತಿಯ ಪರಿಷ್ಕೃತ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ಆದರೆ, ಹೈಕೋರ್ಟ್ ವಿಭಾಗೀಯ ನ್ಯಾಯಪೀಠ 2016ರ ಜೂನ್‌ 21ರಂದು ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಈ ಮೇಲ್ಮನವಿಗೆ ಸಂಬಂಧಿಸಿದಂತೆ 2018ರ ಏಪ್ರಿಲ್‌ 11ರವರೆಗೆ ತಡೆ ಇತ್ತು. ಆನಂತರ ಮೇಲ್ಮನವಿ ವಜಾಗೊಂಡಿತ್ತು’ ಎಂದು ಕೆಪಿಎಸ್‌ಸಿಯು ಹೈಕೋರ್ಟ್‌ಗೆ 2019ರ ಜನವರಿಯಲ್ಲಿ ತಿಳಿಸಿತ್ತು.

ಹೈಕೋರ್ಟ್‌ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಿದರೆ ಮೂರೂ ಸಾಲಿನಲ್ಲಿ ನೇಮಕಗೊಂಡು ಐಎಎಸ್‌ಗೆ ಬಡ್ತಿ ಪಡೆದಿರುವ ಏಳು ಅಧಿಕಾರಿಗಳು ಹಿಂಬಡ್ತಿ ಪಡೆಯಲಿದ್ದಾರೆ. ಜತೆಗೆ, 28 ಅಧಿಕಾರಿಗಳ ಹುದ್ದೆಗೆ ಕುತ್ತು ಬರಲಿದೆ ಎಂದು ಅಂದಾಜಿಸಲಾಗಿದೆ. ಉದ್ಯೋಗ ಕಳೆದುಕೊಳ್ಳುವವರ ಮತ್ತು ಬದಲಿಗೆ ನೇಮಕಗೊಳ್ಳುವ ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಎಸ್‌ಸಿ ಈಗಾಗಲೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ (ಡಿಪಿಎಆರ್‌) ಸಲ್ಲಿಸಿದೆ. ಆದರೆ, ರಾಜಕೀಯ ಒತ್ತಡದಿಂದ ಅದನ್ನು ರಾಜ್ಯ ಸರ್ಕಾರ ಜಾರಿಗೊಳಿಸಿಲ್ಲ ಎಂಬ ಆರೋಪಗಳೂ ಇವೆ.

‘ಈ ವಿಷಯದಲ್ಲಿ ಏನೇನು ಮಾಡಬಹುದು ಎಂಬ ಬಗ್ಗೆ ಎರಡು ಇಲಾಖೆಗಳ ಅಭಿಪ್ರಾಯ ಕೇಳಿದ್ದೇನೆ. ಹೊಸ ಕಾನೂನು ತರುವ ಬಗ್ಗೆ ಪರಿಶೀಲನೆ ನಡೆಸುವಂತೆಯೂ ಸೂಚಿಸಿದ್ದೇನೆ’ ಎಂದು ವಿಜಯಭಾಸ್ಕರ್‌ ತಿಳಿಸಿದರು.

ಸಭೆಯಲ್ಲಿ ಆರ್ಥಿಕ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕಾನೂನು, ಸಂಸದೀಯ ವ್ಯವಹಾರಗಳ ಇಲಾಖೆ ಅಧಿಕಾರಿಗಳು ಹಾಗೂ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಪಾಲ್ಗೊಂಡು ಅಭಿಪ್ರಾಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.