ADVERTISEMENT

KPSC ಪರೀಕ್ಷೆ ಮುಂದೂಡಿಕೆ ಆಗ್ರಹಿಸಿ ಪ್ರತಿಭಟನೆ: ಪೊಲೀಸರಿಂದ ಲಘು ಲಾಠಿ ಪ್ರಹಾರ

ರಾಜಕೀಯ ತಿರುವು ಪಡೆದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2024, 23:48 IST
Last Updated 25 ಆಗಸ್ಟ್ 2024, 23:48 IST
ಕೆಪಿಎಸ್‌ಸಿ
ಕೆಪಿಎಸ್‌ಸಿ    

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳಿಗೆ ನೇಮಕಾತಿಗೆ ಕೆಪಿಎಸ್‌ಸಿ ಇದೇ 27ರಂದು ನಡೆಸಲು ಉದ್ದೇಶಿಸಿರುವ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಆಗ್ರಹಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ಸ್ವರೂಪ ಪಡೆದುಕೊಂಡಿದೆ.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ರಾಜ್ಯಪಾಲರಿಗೆ ಭಾನುವಾರ ಮನವಿ ಸಲ್ಲಿಸಲು ತೆರಳುವಾಗ ಪೊಲೀಸರು ವಶಕ್ಕೆ ಪಡೆದರು. ಪೊಲೀಸರ ಕ್ರಮವನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್‌ ಮುನಿರಾಜು ನೇತೃತ್ವದಲ್ಲಿ ಕಾರ್ಯಕರ್ತರು ವಿಜಯನಗರ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕೆಲವು ಅಭ್ಯರ್ಥಿಗಳು ಮತ್ತು ಯುವ ಮೋರ್ಚಾ ಕಾರ್ಯಕರ್ತರು ಠಾಣೆಯ ಒಳಗೆ ನುಗ್ಗಲು ಯತ್ನಿಸಿದರು. ಗುಂಪು ಚದುರಿಸಲು ಪೊಲೀಸರು ಲಾಠಿ ಬೀಸಿದರು. ಆಗ ಕೆಲವರಿಗೆ ಲಾಠಿ ಏಟು ಬಿದ್ದು ಗಾಯಗಳಾದವು.

ADVERTISEMENT

‘ಠಾಣೆ ಮುಂದೆ ಧರಣಿ ನಡೆಸುವಾಗ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ನ್ಯಾಯಯುತ ಬೇಡಿಕೆ ಮುಂದಿಟ್ಟು ತೆರಳುತ್ತಿದ್ದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ದೌರ್ಜನ್ಯ ಎಸಗಿದ್ದಾರೆ’ ಎಂದು ಧೀರಜ್‌ ಮುನಿರಾಜು ಆರೋಪಿಸಿದರು.

‘ಪರೀಕ್ಷೆ ಮುಂದೂಡಬೇಕು ಎಂದು ವಿದ್ಯಾರ್ಥಿಗಳು ಸ್ವಾತಂತ್ರ್ಯ ಉದ್ಯಾನದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಅವರನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದೆ. ರಾಜ್ಯದ ಕಾಂಗ್ರೆಸ್‌ ಸರ್ಕಾರ ಪ್ರತಿಭಟನೆಯನ್ನು ಪೊಲೀಸ್‌ ಬಲ ಬಳಸಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್‌ ರೆಡ್ಡಿ ದೂರಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.