ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆಯದ 185 ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ಬರೆಯಲು ಹೈಕೋರ್ಟ್ ಮತ್ತು ಕರ್ನಾಟಕ ಆಡಳಿತ ನ್ಯಾಯಮಂಡಳಿ ಷರತ್ತುಬದ್ಧ ಅನುಮತಿ ನೀಡಿದೆ.
ಮುಖ್ಯ ಪರೀಕ್ಷೆಗೆ ಇದೇ 2ರಂದು ಮಧ್ಯಾಹ್ನ 3 ಗಂಟೆಯ ಒಳಗೆ ಶುಲ್ಕ ಸಹಿತ ಖುದ್ದಾಗಿ ಅರ್ಜಿ ಸಲ್ಲಿಸಬೇಕು. ಹೀಗೆ ಅರ್ಜಿ ಸಲ್ಲಿಸಿದವರು ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಕಸ್ತೂರ್ಬಾ ನಗರದ ಬಿಬಿಎಂಪಿ ಸಂಯೋಜಿತ ಪಿಯು ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾಗಬೇಕು. ಈ ಅಭ್ಯರ್ಥಿಗಳು ಪ್ರವೇಶಪತ್ರವನ್ನು ಕೆಪಿಎಸ್‌ಸಿ ಕಚೇರಿಯಲ್ಲಿ ಮೇ 2ರಂದು ಸಂಜೆ 5.30ರವರೆಗೆ ಅಥವಾ ಮರುದಿನ ಬೆಳಿಗ್ಗೆ 8 ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ಪಡೆದು ಪರೀಕ್ಷೆ ಬರೆಯಬೇಕು ಎಂದು ಕೆಪಿಎಸ್‌ಸಿ ತಿಳಿಸಿದೆ.
ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಡಿ. 29ರಂದು ನಡೆದಿದ್ದ ಪೂರ್ವಭಾವಿ ಪರೀಕ್ಷೆಯಲ್ಲಿ ಇಂಗ್ಲಿಷ್‌ನಿಂದ ಕನ್ನಡಕ್ಕೆ ಭಾಷಾಂತರಿಸಿದ್ದ ಪ್ರಶ್ನೆ ಮತ್ತು ಉತ್ತರಗಳಲ್ಲಿ ಲೋಪದ ಕಾರಣಕ್ಕೆ ಮತ್ತೆ ಪೂರ್ವಭಾವಿ ಪರೀಕ್ಷೆ ನಡೆಸಬೇಕು ಎಂದು ಅಭ್ಯರ್ಥಿಗಳು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಕೆಪಿಎಸ್‌ಸಿ ಮುಖ್ಯ ಪರೀಕ್ಷೆಯನ್ನು ಮೇ 3,5, 7 ಮತ್ತು 9ರಂದು ನಡೆಸಲು ನಿರ್ಧರಿಸಿತ್ತು. ಹೀಗಾಗಿ, ಮುಖ್ಯ ಪರೀಕ್ಷೆ ಬರೆಯಲು ಅವಕಾಶ ನೀಡಿರುವ ಕೋರ್ಟ್, ಅರ್ಜಿಯನ್ನು ಮುಂದಿನ ದಿನಗಳಲ್ಲಿ ಪರಿಗಣಿಸುವುದಾಗಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.