ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಅಧ್ಯಕ್ಷ ಮತ್ತು ಸದಸ್ಯರ ನಾಮನಿರ್ದೇಶನಕ್ಕೆ ಸಂಬಂಧಿಸಿದಂತೆ ಪಿ.ಸಿ.ಹೋಟಾ ಸಮಿತಿಯ ಶಿಫಾರಸಿಗೆ ಅನುಗುಣವಾಗಿ ಶೋಧನಾ ಸಮಿತಿ ರಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆದೇಶಿಸಿರುವುದನ್ನು ಹೈಕೋರ್ಟ್ ಶ್ಲಾಘಿಸಿದೆ.
ಎಂಜಿನಿಯರ್‌ಗಳ ನೇಮಕಾತಿಗೆ ಸಂಬಂಧಿಸಿದ ಪ್ರಕರಣದಲ್ಲಿ, ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಸ್‌ಎಟಿ) ಆದೇಶ ಪ್ರಶ್ನಿಸಿ ಎಂಜಿನಿಯರ್‌ಗಳಾದ ವಿಶ್ವಾಸ್ ಮತ್ತಿತರರು ಸಲ್ಲಿಸಿರುವ ರಿಟ್ ಅರ್ಜಿಗಳ ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಅವರು ನೀಡಿರುವ ಹೇಳಿಕೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ ಅವರಿದ್ದ ವಿಭಾಗೀಯ ನ್ಯಾಯಪೀಠ ತನ್ನ ದೈನಂದಿನ ಆದೇಶದಲ್ಲಿ ಉಲ್ಲೇಖಿಸಿದೆ.
‘ಶೋಧನಾ ಸಮಿತಿಯಲ್ಲಿ ತಲಾ ಒಬ್ಬರು ಮಹಿಳೆ ಮತ್ತು ತುಳಿತಕ್ಕೊಳಗಾದ ಸಮುದಾಯದ ವ್ಯಕ್ತಿಯನ್ನು ಸದಸ್ಯರನ್ನಾಗಿ ಮಾಡಬೇಕೆಂಬ ನ್ಯಾಯಪೀಠದ ಸಲಹೆಯನ್ನು ಸಂಪುಟ ಸಭೆಯ ಮುಂದೆ ಇರಿಸಲಾಗುವುದು. ಇದನ್ನು ಸಚಿವ ಸಂಪುಟ ಪರಿಶೀಲಿಸಲಿದೆ’ ಎಂಬ ಅಡ್ವೊಕೇಟ್ ಜನರಲ್ ಅವರ ಹೇಳಿಕೆಯನ್ನೂ ನ್ಯಾಯಪೀಠ ಶ್ಲಾಘಿಸಿದೆ.
ಇದೇ ವೇಳೆ ನ್ಯಾಯಪೀಠಕ್ಕೆ ಮುಚ್ಚಿದ ಲಕೋಟೆಯೊಂದನ್ನು ಸಲ್ಲಿಸಿರುವ ರಾಜ್ಯ ಸರ್ಕಾರ, ‘ಒಂದು ವೇಳೆ ನ್ಯಾಯಾಲಯ ಕೆಪಿಎಸ್‌ಸಿ ಹಗರಣದ ತನಿಖೆ ನಡೆಸಲು ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿದರೆ ಅದಕ್ಕಾಗಿ ಮೂವರು ಐಪಿಎಸ್ ಅಧಿಕಾರಿಗಳನ್ನು ಪರಿಗಣಿಸಬಹುದು’ ಎಂದು ಮೂವರು ಅಧಿಕಾರಿಗಳ ಹೆಸರುಗಳನ್ನು ನಮೂದಿಸಿದೆ.
ಪ್ರಕರಣದಲ್ಲಿ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲರಾದ ವಿ.ಲಕ್ಷ್ಮಿನಾರಾಯಣ, ಎಂ.ಎಸ್.ಭಾಗವತ್ ಮತ್ತು ಕೆಪಿಎಸ್‌ಸಿ ಪರ ಪದಾಂಕಿತ ಹಿರಿಯ ವಕೀಲ ಪಿ.ಎಸ್.ರಾಜಗೋಪಾಲ್ ವಾದ ಮಂಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.