ADVERTISEMENT

ಆರ್‌.ಆರ್. ನಗರ ‘ಕೈ’ ಅಭ್ಯರ್ಥಿ ವಿರುದ್ಧ ಪ್ರಕರಣ: ಎಫ್‌ಐಆರ್‌ ವಾಪಸ್‌ಗೆ ಪಟ್ಟು

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2020, 21:17 IST
Last Updated 16 ಅಕ್ಟೋಬರ್ 2020, 21:17 IST
ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯ ಎದುರು ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು
ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯ ಎದುರು ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು   

ಬೆಂಗಳೂರು: ‘ಚುನಾವಣಾ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಆರ್‌.ಆರ್. ನಗರ ಕ್ಷೇತ್ರದ ಪಕ್ಷದ ಅಭ್ಯರ್ಥಿ ಎಚ್‌. ಕುಸುಮಾ ವಿರುದ್ಧ ದಾಖಲಿಸಿರುವ ಎಫ್‌ಐಆರ್ ವಾಪಸು ಪಡೆಯಬೇಕು’ ಎಂದು ಆಗ್ರಹಿಸಿ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆ ಎದುರು ಕೆಪಿಸಿಸಿ ಮಹಿಳಾ ಕಾರ್ಯಕರ್ತೆಯರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಬಳಿಕ ಡಿಸಿಪಿ ಸಂಜೀವ್ ಪಾಟೀಲ ಅವರಿಗೆ ಕಾಂಗ್ರೆಸ್‌ ಶಾಸಕಿಯರಾದ ಸೌಮ್ಯಾ ರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್,ಮಾಜಿ ಸಚಿವೆ ಉಮಾಶ್ರೀ ಮನವಿ ಸಲ್ಲಿಸಿದರು.

ಫಲಕಗಳನ್ನು ಹಿಡಿದುಕೊಂಡು ಠಾಣೆಯ ಎದುರು ಪ್ರತಿಭಟನೆ ನಡೆಸಿದ ಮಹಿಳಾ ಕಾರ್ಯಕರ್ತೆಯರು, ‘ಬೇಕೆ ಬೇಕು ನ್ಯಾಯ ಬೇಕು' ಎಂದು ಘೋಷಣೆ ಕೂಗಿದರು. ಈ ವೇಳೆ, ಸಂಜೀವ್ ಪಾಟೀಲ ಜೊತೆ ಮಾತಿನ ಚಕಮಕಿಯೂ ನಡೆಯಿತು.

ADVERTISEMENT

‘ಪೊಲೀಸ್‌ ಅಧಿಕಾರಿಗಳನ್ನು ಬಿಜೆಪಿ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ. ಹೆಣ್ಣು ಮಗಳನ್ನು ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನವನ್ನು ಬಿಜೆಪಿಯವರು ಮಾಡಿದ್ದಾರೆ. ಯಾರದ್ದೋ ಒತ್ತಡಕ್ಕೆ ಒಳಗಾಗಿ ಎಫ್ಐಆರ್ ದಾಖಲಿಸಿದ್ದಾರೆ. ಎಫ್‌ಐಆರ್‌ ದಾಖಲಿಸಿದ ಅಧಿಕಾರಿಯನ್ನು ಅಮಾನತು ಮಾಡಬೇಕು’ ಎಂದು ಪ್ರತಿಭಟನೆಕಾರರು ಪಟ್ಟು ಹಿಡಿದರು.

‘ಮಹಿಳೆಯರು ರಾಜಕೀಯಕ್ಕೆ ಬರುವುದು ಕಡಿಮೆ. ಅಂಥದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದೆ. ನಮ್ಮ ಅಭ್ಯರ್ಥಿಯ ಮೇಲೆ ಎಫ್‌ಐಆರ್ ದಾಖಲಿಸಿರುವುದು ಸರಿಯಲ್ಲ. ಇಲ್ಲಿನ ಠಾಣಾಧಿಕಾರಿ ಬಿಜೆಪಿ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಎತ್ತಂಗಡಿ ಮಾಡಬೇಕು ಅಥವಾ ಅಮಾನತು ಮಾಡಬೇಕು’ ಎಂದು ಲಕ್ಷ್ಮೀ ಹೆಬ್ಬಾಳ್ಕರ ಆಗ್ರಹಿಸಿದರು.

‘ಯಾವ ತಪ್ಪು ಮಾಡಿದ್ದಾರೆಂದು ದೂರು ದಾಖಲು ಮಾಡಿದ್ದೀರಿ. ದೂರು ದಾಖಲಿಸಿರುವ ಅಧಿಕಾರಿಯನ್ನು ಅಮಾನತು ಮಾಡಿ’ ಎಂದು ಪುಷ್ಪಾ ಅಮರನಾಥ್ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.