
ಟಿ.ಎ.ನಾರಾಯಣಗೌಡ
ಚಿತ್ರ ಕೃಪೆ: ಎಕ್ಸ್
ಬೆಂಗಳೂರು: ಕೆಎಎಸ್ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ಕ್ಕೆ ಸಾವಿರಾರು ಕರವೇ ಕಾರ್ಯಕರ್ತರಿಂದ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಅನ್ನು ಅವರು ಹಂಚಿಕೊಂಡಿದ್ದಾರೆ.
ಶನಿವಾರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಮುಖಂಡರು, ಬೆಂಗಳೂರು ನಗರ ಪದಾಧಿಕಾರಿಗಳ ತುರ್ತು ಸಭೆ ನಡೆಯಿತು. ಬಹಳ ಮುಖ್ಯವಾಗಿ ಕೆಪಿಎಸ್‌ಸಿ ನಡೆಸಿದ ಕೆಎಎಸ್ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯದ ಹಿನ್ನೆಲೆಯಲ್ಲಿ ಕರವೇ ಸಂಘಟಿಸಿರುವ ಚಳವಳಿಯನ್ನು ತೀವ್ರಗೊಳಿಸುವ ಕುರಿತು ಚರ್ಚೆ ನಡೆಸಲಾಯಿತು ಎಂದು ನಾರಾಯಣಗೌಡ ಹೇಳಿದ್ದಾರೆ.
ಫೆ.18ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಹೋರಾಟ ನಡೆಸಿದ್ದೆವು. ಚಳವಳಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಕರವೇ ನಿಯೋಗ ಭೇಟಿ ಮಾಡಿ ಆಗಿರುವ ಅನ್ಯಾಯವನ್ನು ಬಿಡಿಸಿ ಹೇಳಿತ್ತು. ಈ ಸಂದರ್ಭದಲ್ಲಿ ನಮ್ಮ ಚಳವಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ ಕೆಪಿಎಸ್‌ಸಿ ಅಧ್ಯಕ್ಷರ ಮತ್ತು ಅಧಿಕಾರಿಗಳನ್ನು ಕರೆಯಿಸಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದರು ಎಂದು ಅವರು ತಿಳಿಸಿದ್ದಾರೆ.
ಆದರೆ, ನಾಲ್ಕು ದಿನಗಳು ಕಳೆದರೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡುವ ಕುರಿತು ಸ್ವತಃ ಮುಖ್ಯಮಂತ್ರಿಗಳಾಗಲಿ, ಕೆಪಿಎಸ್‌ಸಿಯಾಗಲಿ ಒಂದೇ ಒಂದು ಮಾತು ಹೇಳಿಲ್ಲ. ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯಕ್ಕೆ ಯಾರೂ ಸ್ಪಂದಿಸುವ ಹಾಗೆ ಕಾಣುತ್ತಿಲ್ಲ. ನಮ್ಮ ಶಾಂತಿಯುತ ಹೋರಾಟಕ್ಕೆ ಸರ್ಕಾರ, ಕೆಪಿಎಸ್‌ಸಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದ್ದರಿಂದ ನಾವು ಅನಿವಾರ್ಯವಾಗಿ ತೀವ್ರ ಸ್ವರೂಪದ ಹೋರಾಟಕ್ಕೆ ಕೈ ಹಾಕಬೇಕಾಗಿದೆ. ಚಳವಳಿಯ ಸ್ವರೂಪದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಚರ್ಚೆಯ ನಂತರ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಕರವೇ ಕಾರ್ಯಕರ್ತರು ಮತ್ತು ಸಾವಿರಾರು ವಿದ್ಯಾರ್ಥಿಗಳು ಕೆಪಿಎಸ್‌ಸಿ ಕಚೇರಿಗೆ ಮುತ್ತಿಗೆ ಹಾಕುವ ನಿರ್ಧಾರ ಕೈಗೊಳ್ಳಲಾಯಿತು. ಸರ್ಕಾರ ಮತ್ತು ಕೆಪಿಎಸ್‌ಸಿ ನಮ್ಮ ಮುಂದಿನ ಹೋರಾಟಗಳ ಆಗುಹೋಗುಗಳಿಗೆ ಜವಾಬ್ದಾರಿ ಹೊರಬೇಕು. ನಾವು ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವವರೆಗೂ ಕೈಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ ಎಂದು ನಾರಾಯಣಗೌಡ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.