ಬೆಂಗಳೂರು: ‘ವಾಣಿಜ್ಯ ತೆರಿಗೆ ಇಲಾಖೆಯ ಪರಿವೀಕ್ಷಕ (ಸಿಟಿಐ) 230 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಎರಡು ದಿನಗಳ ಒಳಗೆ ಪ್ರಕಟಿಸುವುದಾಗಿ ಕೆಪಿಎಸ್‌ಸಿ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಭರವಸೆ ನೀಡಿದ್ದಾರೆ’ ಎಂದು ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ‘ಫೇಸ್ ಬುಕ್’ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ಸಿಟಿಐ ಹುದ್ದೆಗಳಿಗೆ ನೇಮಕಾತಿಗೆ ಪರೀಕ್ಷೆ ನಡೆದು ವರ್ಷ ಕಳೆದರೂ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ ಆಗಿಲ್ಲ. ಆದಷ್ಟು ಬೇಗ ಪಟ್ಟಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ, ಕೆಪಿಎಸ್‌ಸಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗೆ ಜ. 24ರಂದು ಪತ್ರ ಬರೆದು ಮನವಿ ಮಾಡಿದ್ದೆ. ಪಟ್ಟಿ ಬಿಡುಗಡೆ ಮಾಡದಿದ್ದರೆ ಫೆಬ್ರವರಿ ಮೊದಲ ವಾರದಲ್ಲಿ ಕೆಪಿಎಸ್‌ಸಿ ಬಾಗಿಲು ತಟ್ಟಿ ನ್ಯಾಯ ಕೇಳುವುದಾಗಿ ತಿಳಿಸಿದ್ದೆ. ಅದೇ ರೀತಿ, ಕೆಪಿಎಸ್‌ಸಿಗೆ ಹೋಗಿದ್ದಾಗ ಈ ಭರವಸೆ ಸಿಕ್ಕಿದೆ’ ಎಂದಿದ್ದಾರೆ.
‘ಸಹಕಾರ ಇಲಾಖೆಯ ಸಹಕಾರ ಸಂಘಗಳ ನಿಬಂಧಕರ ಕಚೇರಿಯಲ್ಲಿನ ಸಹಕಾರ ಸಂಘಗಳ 47 ನಿರೀಕ್ಷಕರು, ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ 242 ಲೆಕ್ಕ ಸಹಾಯಕರು ಮತ್ತು ಸಹಕಾರ ಇಲಾಖೆಯಲ್ಲಿನ ಸಹಕಾರ ಸಂಘಗಳ 53 ಸಹಕಾರ ಸಂಘಗಳ ನಿರೀಕ್ಷಕರ ಅಂತಿಮ ಆಯ್ಕೆ ಪಟ್ಟಿ, ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ 15 ವಾಣಿಜ್ಯ ತೆರಿಗೆ ಪರಿವೀಕ್ಷಕರ ಮತ್ತು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ 67 ಕಿರಿಯ ಲೆಕ್ಕ ಸಹಾಯಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಮುಂದಿನ 15 ದಿನಗಳ ಒಳಗೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ’ ಎಂದೂ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.