ವರ್ಗಾವಣೆ
ಬೆಂಗಳೂರು: ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಲ್ಲಿದ್ದ ಪಂಕಜ್ ಕುಮಾರ್ ಪಾಂಡೆ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಇ–ಆಡಳಿತ) ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ಜಲಮಂಡಳಿಯ ಅಧ್ಯಕ್ಷ ವಿ.ರಾಮ್ ಪ್ರಸಾತ್ ಮನೋಹರ್ ಅವರಿಗೆ ಕೆಪಿಟಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯ ಹೆಚ್ಚುವರಿ ಹೊಣೆ ನೀಡಿ ಸರ್ಕಾರವು ಆದೇಶಿಸಿದೆ.
ಕೆಪಿಟಿಸಿಎಲ್ ವ್ಯವಸ್ಥಾಪಕ ಹುದ್ದೆಯಲ್ಲಿದ್ದ ಅವಧಿಯಲ್ಲಿ ಪಾಂಡೆ ಅವರು ಹಲವು ಅಧಿಕೃತ ಸಭೆಗಳಿಗೆ ಗೈರು ಹಾಜರಾಗಿದ್ದರು. ಈ ಬಗ್ಗೆ ನೋಟಿಸ್ ನೀಡಿ, ವಿವರಣೆ ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು. ಅದರಂತೆ ಮುಖ್ಯ ಕಾರ್ಯದರ್ಶಿ ನೀಡಿದ್ದ ನೋಟಿಸ್‌ಗೆ ಅವರು ವಿವರಣೆ ನೀಡಿದ್ದರು.
ಅದರ ಬೆನ್ನಲ್ಲೇ, ತಮ್ಮ ಇಲಾಖೆಯಲ್ಲಿ ಮುಖ್ಯಮಂತ್ರಿ ಅವರ ಮಗ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಹಸ್ತಕ್ಷೇಪ ಹೆಚ್ಚುತ್ತಿದೆ ಎಂದು ಬೇಸರಗೊಂಡಿದ್ದ ಕೆ.ಜೆ.ಜಾರ್ಜ್ ಅವರು ಇಂಧನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ವಿಷಯ ವಿಧಾನಸಭೆಯಲ್ಲೂ ಚರ್ಚೆಗೆ ಕಾರಣವಾಗಿತ್ತು. ಈ ವದಂತಿಯನ್ನು ಜಾರ್ಜ್ ಅವರು ನಿರಾಕರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.