ADVERTISEMENT

ಕೃಷ್ಣಾ ಮೇಲ್ಡಂಡೆ | ಅಧಿಸೂಚನೆ ಹೊರಡಿಸಲು ಒತ್ತಾಯ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 3 ಮೇ 2025, 11:24 IST
Last Updated 3 ಮೇ 2025, 11:24 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ಸುಪ್ರೀಂಕೋರ್ಟ್‌ ಮಧ್ಯಂತರ ಆದೇಶ, ಕೇಂದ್ರದ ಅಧಿಸೂಚನೆ ನಂತರ ಆಲಮಟ್ಟಿ ಜಲಾಶಯದ ಎತ್ತರವನ್ನು 524 ಮೀಟರ್‌ಗೆ ಹೆಚ್ಚಿಸುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಜಲಶಕ್ತಿ ಸಚಿವರು ಮೇ 7ರಂದು ಕರೆದಿರುವ ಕೃಷ್ಣಾ ಕಣಿವೆ ವ್ಯಾಪ್ತಿಯ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಯ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ, ಕಾನೂನು ತಜ್ಞರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಅವರು ಮಾತನಾಡಿದರು. 

ADVERTISEMENT

ಎರಡನೇ ನ್ಯಾಯಾಧಿಕರಣದ ಆದೇಶದಲ್ಲಿ 173 ಟಿಎಂಸಿ ಅಡಿ ನೀರು ಬಳಸಿಕೊಳ್ಳಲು ಅನುಮತಿ ನೀಡಲಾಗಿತ್ತು. ಕೃಷ್ಣ ಮೇಲ್ಡಂಡೆ ಮೂರನೇ ಹಂತಕ್ಕೆ 130 ಟಿಎಂಸಿ ಅಡಿ ನಿಗದಿ ಮಾಡಿದೆ. ಅಣೆಕಟ್ಟೆಯ ಎತ್ತರವನ್ನು ಈಗಿರುವ 519 ಮೀಟರ್‌ಗಳಿಂದ ಐದು ಮೀಟರ್‌ ಹೆಚ್ಚಿಸಿದರೆ ಕರ್ನಾಟಕಕ್ಕೆ ಹಂಚಿಕೆ ಮಾಡಿರುವ ನೀರನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತದೆ. ಅದಕ್ಕಾಗಿ ಕೃಷ್ಣಾ ಜಲವಿವಾದ ನ್ಯಾಯಮಂಡಳಿ ಅಂತಿಮ ತೀರ್ಪಿನ ಅನುಷ್ಠಾನ ಕುರಿತು ಸರ್ವಪಕ್ಷ ಸಭೆ ಕರೆಯಲಾಗುವುದು. ತಕ್ಷಣವೇ ಅಧಿಸೂಚನೆ ಹೊರಡಿಸಲು ಕೇಂದ್ರವನ್ನು ಒತ್ತಾಯಿಸಲಾಗುವುದು ಎಂದರು.

ಕೃಷ್ಣಾ ಜಲವಿವಾದ ನ್ಯಾಯಮಂಡಳಿ 2010ರಲ್ಲಿ ತೀರ್ಪು ನೀಡಿತ್ತು. ಅಂತಿಮ ತೀರ್ಪು ನೀಡಿ 15 ವರ್ಷಗಳಾಗಿವೆ. ಆದರೆ, ಇಲ್ಲಿಯವರೆಗೂ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ. ಈ ಕುರಿತು ಕೇಂದ್ರ ನೀರಾವರಿ ಸಚಿವರನ್ನು ಭೇಟಿ ಮಾಡಿ, ಒತ್ತಾಯಿಸಿದ ನಂತರ ಈಗ ಸಭೆ ಕರೆಯಲಾಗಿದೆ ಎಂದು ಹೇಳಿದರು.

ತೆಲಂಗಾಣ ಮತ್ತು ಆಂಧ್ರ ಪ್ರದೇಶ ಕೂಡ ಅರ್ಜಿ ಹಾಕಿಕೊಂಡಿದೆ. ಅವರು ತಮ್ಮ ಪಾಲಿಗೆ ಹಂಚಿಕೆಯಾಗಿರುವ ನೀರು ಬಳಸಿಕೊಳ್ಳಲು ಕರ್ನಾಟಕದ ಅಭ್ಯಂತರವಿಲ್ಲ ಎಂದರು.

ಕಾವೇರಿ ಜಲವಿವಾದ ನ್ಯಾಯಮಂಡಳಿ ತೀರ್ಪಿಗೆ ಸಂಬಂಧಿಸಿದಂತೆ ಸಿವಿಲ್ ಮೇಲ್ಮನವಿಗಳು ಬಾಕಿ ಇರುವಾಗಲೂ ಕಾವೇರಿ ನ್ಯಾಯಾಧೀಕರಣದ ತೀರ್ಪು ಪ್ರಕಟಿಸಲು ಸುಪ್ರೀಂಕೋರ್ಟ್ ನಿರ್ದೇಶಿಸಿರುತ್ತದೆ. ಈ ಕುರಿತು ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಇನ್ನೂ ಅಧಿಸೂಚನೆ  ಹೊರಡಿಸಿಲ್ಲ. ರಾಜ್ಯದ ಪಾಲಿನ ನೀರು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಎಚ್.ಕೆ. ಪಾಟೀಲ, ಎಂ.ಬಿ. ಪಾಟೀಲ, ಆರ್.ಬಿ. ತಿಮ್ಮಾಪುರ, ಶರಣಬಸಪ್ಪ ಗೌಡ ದರ್ಶನಾಪುರ, ಮಹಾದೇವಪ್ಪ, ಶಿವಾನಂದ ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ವಕೀಲ ಮೋಹನ್‌ ಕಾತರ್ಕಿ ಉಪಸ್ಥಿತರಿದ್ದರು.

ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ಬೆಳಗಾವಿ ಅಧಿವೇಶನದಲ್ಲೇ ತೀರ್ಮಾನಿಸಿದ್ದೇವೆ. 15 ವರ್ಷಗಳಲ್ಲಿ ಯೋಜನಾ ವೆಚ್ಚ ಏರಿಕೆಯಾಗುತ್ತಿದೆ.
ಡಿ.ಕೆ. ಶಿವಕುಮಾರ್‌, ಉಪಮುಖ್ಯಮಂತ್ರಿ
ಕಳೆದ ಐದು ವರ್ಷವೂ ಪ್ರವಾಹದಿಂದ ಕೃಷ್ಣಾ ನದಿ ಪಾತ್ರದ ಜನರು ಸಂಕಷ್ಟ ಅನುಭವಿಸಿದ್ದಾರೆ. ಹೆಚ್ಚುವರಿ ನೀರನ್ನು ಕಾಲುವೆಗೆ ಹರಿಸಿಕೊಳ್ಳಬಹುದು.
ಎಚ್‌.ಕೆ. ಪಾಟೀಲ, ಕಾನೂನು ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.