ಬೆಂಗಳೂರು: ‘ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದ 20 ಕಿ.ಮೀ.ವ್ಯಾಪ್ತಿಯಲ್ಲಿ ಸ್ಫೋಟ ಗಣಿಗಾರಿಕೆಗೆ ಅವಕಾಶವಿಲ್ಲ’ ಎಂಬ ಮಹತ್ವದ ಆದೇಶ ನೀಡಿದ್ದ ಹೈಕೋರ್ಟ್, ಇದೀಗ ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಯಾವುದೇ ವ್ಯಕ್ತಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಲು ಅವಕಾಶ ಕಲ್ಪಿಸಿ ಆದೇಶಿಸಿದೆ.
ಈ ಸಂಬಂಧ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ವೈ.ಸಿ.ಮಧು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.
‘ಘೋಷಿತ ಜಲಾಶಯಗಳನ್ನು ರಕ್ಷಿಸುವ ಸದುದ್ದೇಶದಿಂದ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಹಾಗಾಗಿ, ಇಂತಹ ಪ್ರಕರಣಗಳಲ್ಲಿ ನ್ಯಾಯಿಕ ಕಾರ್ಯವಾಹಿ ಹಕ್ಕಿನ ಪ್ರಶ್ನೆ ಅನ್ವಯಿಸುವುದಿಲ್ಲ. ಯಾರು ಬೇಕಾದರೂ ನ್ಯಾಯಾಲಯದ ಮೆಟ್ಟಿಲೇರಬಹುದು’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಈ ಮೂಲಕ ನ್ಯಾಯಪೀಠವು, ಕೆಆರ್‌ಎಸ್ ಸುತ್ತಮುತ್ತಲಿನ ಸ್ಫೋಟ ಗಣಿಗಾರಿಕೆ ಅವಕಾಶ ನಿರ್ಬಂಧಿಸಿ ಕಳೆದ ವರ್ಷ ಹೈಕೋರ್ಟ್ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಪಾಲನೆ ಮಾಡದೇ ಇರುವವರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಕ್ಕೆ ಅನುಮತಿ ನೀಡಿದೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎನ್.ಕಿರಣ್ ವಾದ ಮಂಡಿಸಿದರು.
‘ಕೆಆರ್‌ಎಸ್ ಜಲಾಶಯ ಸಂರಕ್ಷಣೆಗೆ ಸರಿಯಾದ ಪ್ರಯತ್ನಗಳು ನಡೆಯುತ್ತಿಲ್ಲ. ಹಾಗಾಗಿ, ಧನಬಾದ್‌ನಲ್ಲಿರುವ ಕೇಂದ್ರೀಯ ಗಣಿ ಮತ್ತು ಇಂಧನ ಸಂಶೋಧನಾ ಸಂಸ್ಥೆಯಿಂದ ಜಲಾಶಯ ಮತ್ತು ಸುತ್ತಲಿನ ಭಾಗದಲ್ಲಿ ಗಣಿಗಾರಿಕೆ ಚಟುವಟಿಕೆ ನಡೆಸುತ್ತಿರುವ ಕುರಿತಂತೆ ವೈಜ್ಞಾನಿಕ ಸಮೀಕ್ಷೆ ನಡೆಸುವ ಅಗತ್ಯವಿದೆ‘ ಎಂದು ಅಂದಿನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಕೆಆರ್‌ಎಸ್ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಗಣಿಗಾರಿಕೆ, ಕ್ವಾರಿ ಚಟುವಟಿಕೆಗಳನ್ನು ನಿಷೇಧಿಸಿ 2024ರ ಜನವರಿ 8ರಂದು ಮಧ್ಯಂತರ ಆದೇಶ ಹೊರಡಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.