ADVERTISEMENT

ನಾಳೆಯಿಂದ ನಾಲೆಗಳಿಗೆ ಕೆಆರ್‌ಎಸ್‌ ನೀರು: ಕಾವೇರಿ ಸಲಹಾ ಸಮಿತಿ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 15 ಜುಲೈ 2019, 15:40 IST
Last Updated 15 ಜುಲೈ 2019, 15:40 IST
   

ಮಂಡ್ಯ: ಜಿಲ್ಲಾ ವ್ಯಾಪ್ತಿಯಲ್ಲಿ ಬೆಳೆದು ನಿಂತಿರುವ ಬೆಳೆಗಳ ಸಂರಕ್ಷಣೆಗಾಗಿ ಕೆಆರ್‌ಎಸ್‌ ಜಲಾಶಯದಿಂದ ನಾಲೆಗಳಿಗೆ ಒಂದು ಕಟ್ಟು ನೀರು ಹರಿಸಲು ಸೋಮವಾರ ಬೆಂಗಳೂರಿನಲ್ಲಿ ನಡೆದ ಕಾವೇರಿ ಸಲಹಾ ಸಮಿತಿ (ಐಸಿಸಿ) ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ನೇತೃತ್ವದಲ್ಲಿ ನಡೆದ ಸಮಿತಿ ಸಭೆಯಲ್ಲಿ ಮಂಗಳವಾರ ರಾತ್ರಿಯಿಂದಲೇ ನೀರು ಹರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಒಣಗುತ್ತಿರುವ ಕಬ್ಬು, ಭತ್ತದ ಬೆಳೆ ರಕ್ಷಣೆಗೆ ನೀರು ಹರಿಸುವಂತೆ ರೈತರು ಜಿಲ್ಲೆಯಾದ್ಯಂತ ಹೋರಾಟ ನಡೆಸುತ್ತಿದ್ದರು. ಹೋರಾಟಕ್ಕೆ ಮಣಿದಿರುವ ಸರ್ಕಾರ ಒಂದು ಕಟ್ಟು (10 ದಿನ) ನೀರು ಬಿಡಲು ಐಸಿಸಿ ಸಭೆಯಲ್ಲಿ ನಿರ್ಧರಿಸಿದೆ.

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯ ನಂತರ ಕಾವೇರಿ ಸಲಹಾ ಸಮಿತಿ ಮಾನ್ಯತೆ ಕಳೆದುಕೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಜನ–ಜಾನುವಾರುಗಳ ಕುಡಿಯುವ ನೀರಿಗೂ ತತ್ವಾರ ಉಂಟಾಗಿರುವ ಕಾರಣ ಐಸಿಸಿ ಸಭೆ ನಡೆಸಿ ನೀರು ಹರಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ADVERTISEMENT

‘ನದಿ ನೀರು ನಿರ್ವಹಣಾ ಪ್ರಾಧಿಕಾರದ ಅನುಮತಿಯ ಮೇರೆಗೆ ಐಸಿಸಿ ಸಭೆ ನಡೆಸಲಾಗಿದೆ. ಪ್ರಾಧಿಕಾರದ ಮುಖ್ಯ ಎಂಜಿನಿಯರ್‌ವೊಬ್ಬರು ಸಭೆಯಲ್ಲಿ ಪಾಲ್ಗೊಂಡಿದ್ದರು. ಅವರಿಗೆ ಇಲ್ಲಿಯ ಪರಿಸ್ಥಿತಿಯನ್ನು ಮನದಟ್ಟು ಮಾಡಿಕೊಡಲಾಗಿದೆ. ರಾಜ್ಯದ ಕೋಟಾದಡಿ ರೈತರ ಪಾಲಿನ ನೀರು ಬಳಕೆ ಮಾಡಿಕೊಳ್ಳುವಲ್ಲಿ ಯಾವುದೇ ಅಡ್ಡಿ ಇಲ್ಲ. ತಮಿಳುನಾಡಿನ ಪಾಲಿನ ನೀರು ಹರಿಸಲು ಕಾವೇರಿ ನೀರಾವರಿ ನಿಗಮ ನಿರ್ಧಾರ ಕೈಗೊಳ್ಳಲಿದೆ’ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ‘ಪ್ರಜಾವಾಣಿ’ಗೆ ತಿಳಿಸಿದರು.

90 ಅಡಿಗೆ ಏರಿಕೆ: ಸೋಮವಾರ ಸಂಜೆಯ ವೇಳೆಗೆ ಜಲಾಶಯದ ನೀರಿನ ಮಟ್ಟದ 90.50 ಅಡಿಗೆ ತಲುಪಿದೆ. ಕೊಡಗು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿರುವ ಕಾರಣ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ಸೋಮವಾರ ಒಳಹರಿವು 3,641 ಕ್ಯುಸೆಕ್‌, ಹೊರ ಹರಿವು 403 ಕ್ಯಸೆಕ್‌ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.