
ಬೆಂಗಳೂರು: ಸರ್ಕಾರಿ ಪ್ರಥಮದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ನ.2ರಂದು 11 ಜಿಲ್ಲೆಗಳಲ್ಲಿ ನಡೆಯಲಿದೆ.
33 ವಿಷಯಗಳಿಗೆ ನಡೆಯುವ ಕೆ-ಸೆಟ್ ಪರೀಕ್ಷೆಗೆ 1.36 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳ 316 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಂಗಳೂರಿನಲ್ಲಿ ಎಲ್ಲ 33 ವಿಷಯಗಳ ಪರೀಕ್ಷೆ ನಡೆದರೆ, ಉಳಿದ ಜಿಲ್ಲೆಗಳಲ್ಲಿ 11 ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಳಿಗೆ ನೆಗೆಟಿವ್ ಮೌಲ್ಯಮಾಪನ ಇರುವುದಿಲ್ಲ.
ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಸಮಯ ನಿಗದಿ ಮಾಡಲಾಗಿದ್ದು, ಒಮ್ಮೆಗೆ ಪತ್ರಿಕೆ–1 ಮತ್ತು ಪತ್ರಿಕೆ– 2 ನೀಡಲಾಗುತ್ತದೆ. ಅಭ್ಯರ್ಥಿಗಳು ಮೂರು ಗಂಟೆ ಅವಧಿಯಲ್ಲಿ 100 ಅಂಕಗಳ ಸಾಮಾನ್ಯ ಜ್ಞಾನ ಮತ್ತು 200 ಅಂಕಗಳ ವಿಷಯವಾರು ಪತ್ರಿಕೆಗಳಿಗೆ ಉತ್ತರಿಸಬೇಕು. ಎರಡೂ ಪತ್ರಿಕೆಗಳಿಗೆ ಪ್ರತ್ಯೇಕ ಒಎಂಆರ್ ನೀಡುತ್ತಿದ್ದು, ಆಯಾ ಒಎಂಆರ್‌ನಲ್ಲೇ ಉತ್ತರಗಳನ್ನು ಎಚ್ಚರಿಕೆಯಿಂದ ದಾಖಲಿಸಬೇಕು ಎಂದು ಪರೀಕ್ಷಾ ಪ್ರಾಧಿಕಾರ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.
ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಗಳ ಪ್ರವೇಶಕ್ಕೂ ಮುನ್ನ ಪೊಲೀಸ್ ಮತ್ತು ಗೃಹ ರಕ್ಷಕ ಸಿಬ್ಬಂದಿ ಅಭ್ಯರ್ಥಿಗಳ ಮುಖ ಚಹರೆ ಪತ್ತೆ ಕಾರ್ಯ ನಡೆಸುವರು. ಹಾಗಾಗಿ, ನಿಗದಿತ ಸಮಯಕ್ಕಿಂತ ಸಾಕಷ್ಟು ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು ಎಂದು ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.