ಬೆಂಗಳೂರು: ‘ಮಳವಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಅವರನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸಂಪುಟ ದರ್ಜೆ ಸ್ಥಾನಮಾನ ನೀಡಿ ಲಾಭದಾಯಕ ಹುದ್ದೆಗೆ ಅವಕಾಶ ಮಾಡಿಕೊಡಲಾಗಿದೆ’ ಎಂದು ಆಕ್ಷೇಪಿಸಿ ಹೈಕೋರ್ಟ್‌ಗೆ ಮತ್ತೊಂದು ಅರ್ಜಿ ಸಲ್ಲಿಸಲಾಗಿದೆ.
ಈ ಸಂಬಂಧ ಹೈಕೋರ್ಟ್ ವಕೀಲ ಎಂ.ಶ್ರೇಯಸ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಇನ್ನಷ್ಟು ಅರ್ಜಿಗಳು ಇದೇ 13ರಂದು ವಿಚಾರಣೆಗೆ ನಿಗದಿಯಾಗಿವೆ. ಹಾಗಾಗಿ, ಈ ಅರ್ಜಿಯಲ್ಲೂ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ಬೇರೆ ಅರ್ಜಿಗಳೊಂದಿಗೆ ಸೇರ್ಪಡೆಗೊಳಿಸಿ ವಿಚಾರಣೆ ನಡೆಸಬೇಕು’ ಎಂದು ಕೋರಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಶಾಸಕ ಪಿ.ಎಂ.ನರೇಂದ್ರ ಸ್ವಾಮಿ, ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.
ಪಿ.ಎಂ.ನರೇಂದ್ರ ಸ್ವಾಮಿ ಅವರನ್ನು ಕೆಎಸ್‌ಪಿಸಿಬಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅರಣ್ಯ ಇಲಾಖೆ 2025ರ ಫೆಬ್ರುವರಿ 5ರಂದು ಅಧಿಸೂಚನೆ ಹೊರಡಿಸಿತ್ತು. ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಏಪ್ರಿಲ್ 29ರಂದು ಆದೇಶಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.