ADVERTISEMENT

ಕುಕ್ಕೆ ಸುಬ್ರಹ್ಮಣ್ಯ ದೇಗುಲ: ವೇತನ ಪರಿಷ್ಕರಣೆಗೆ ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2025, 15:38 IST
Last Updated 25 ಅಕ್ಟೋಬರ್ 2025, 15:38 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ 2018ರ ಏಪ್ರಿಲ್‌ನಿಂದ ಅನ್ವಯವಾಗುವಂತೆ ಆರನೇ ವೇತನ ಆಯೋಗದ ಶಿಫಾರಸಿಗೆ ಅನುಗುಣವಾಗಿ ವೇತನ ಪರಿಷ್ಕರಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಈ ಸಂಬಂಧ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಮತ್ತು ಏಕಸದಸ್ಯ ನ್ಯಾಯಪೀಠದ ಆದೇಶ ಜಾರಿ ಮಾಡದಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಎಂಜಿನಿಯರ್‌ ಆಗಿ ಸೇವೆ ಸಲ್ಲಿಸುತ್ತಿರುವ ಕೆ.ಸಿ.ಉದಯ್‌ ಕುಮಾರ್‌ ಮತ್ತಿತರರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್‌ ಮತ್ತು ನ್ಯಾಯಮೂರ್ತಿ ವಿಜಯ್‌ ಕುಮಾರ್‌ ಎ.ಪಾಟೀಲ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ 2018ರಿಂದ ಅನ್ವಯವಾಗುವಂತೆ ಆರನೇ ವೇತನ ಆಯೋಗದ ಶಿಫಾರಸಿಗೆ ಅನುಗುಣವಾಗಿ ವೇತನ ಪರಿಷ್ಕರಣೆ ಮಾಡಬೇಕೆಂಬ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಮುಂದಿನ ಎಂಟು ವಾರಗಳಲ್ಲಿ ಜಾರಿ ಮಾಡಬೇಕು’ ಎಂದು ನಿರ್ದೇಶಿಸಿರುವ ನ್ಯಾಯಪೀಠ, ಸರ್ಕಾರದ ಮೇಲ್ಮನವಿ ವಜಾಗೊಳಿಸಿದೆ.

ADVERTISEMENT

ಇದೇ ವೇಳೆ, ‘ಈ ಆದೇಶವನ್ನು ಪಾಲಿಸದೇ ಇದ್ದಲ್ಲಿ ಪುನಃ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ’ ಎಂದು ತಿಳಿಸಿರುವ ನ್ಯಾಯಪೀಠ, ಸಿಬ್ಬಂದಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನೂ ವಿಲೇವಾರಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.