ADVERTISEMENT

ರಾಜ್ಯದಲ್ಲಿ ಇರುವುದು ಹೆಬ್ಬೆಟ್ಟು ಗೃಹ ಸಚಿವರಾ?: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2026, 13:55 IST
Last Updated 7 ಜನವರಿ 2026, 13:55 IST
ಎಚ್‌ ಡಿ ಕುಮಾರಸ್ವಾಮಿ 
.
ಎಚ್‌ ಡಿ ಕುಮಾರಸ್ವಾಮಿ  .   

ನವದೆಹಲಿ; ‘ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸುವುದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಯಾರು? ಅವರಿಗೆ ಆ ಅಧಿಕಾರ ಯಾರು ಕೊಟ್ಟರು? ರಾಜ್ಯದಲ್ಲಿ ಇರೋದು ರಬ್ಬರ್ ಸ್ಟ್ಯಾಂಪ್ ಗೃಹ ಸಚಿವರಾ’ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಿವಕುಮಾರ್ ಅವರು ಬಳ್ಳಾರಿಯಲ್ಲಿ ಮಂಗಳವಾರ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಅದಕ್ಕೆ ಗೃಹ ಸಚಿವರು ಇಲ್ಲವೇ? ರಾಜ್ಯದಲ್ಲಿ ಇರುವ ಗೃಹ ಸಚಿವರು ಹೆಬ್ಬೆಟ್ಟು ಸಚಿವರಾ’ ಎಂದು ಪ್ರಶ್ನಿಸಿದರು. 

‘ಶಿವಕುಮಾರ್ ಅವರು ಯಾವ ಅಧಿಕಾರದ ಮೇಲೆ ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ? ಗೃಹ ಇಲಾಖೆಯಲ್ಲಿ ಇವರ ಹಸ್ತಕ್ಷೇಪ ಯಾಕೆ? ಅವರು ಮಂತ್ರಿ ಅಷ್ಟೇ. ಕಾಂಗ್ರೆಸ್ ಸತ್ಯ ಶೋಧನಾ ಸಮಿತಿಗೆ ಅಧಿಕಾರಿಗಳು ಯಾವ ಮಾಹಿತಿ ಕೊಡುತ್ತಾರೆ? ಕಾರ್ಯಕರ್ತರು, ಕಾಂಗ್ರೆಸ್ ನಾಯಕರು ಘಟನೆಗೆ ಕಾರಣರಾದ ಶಾಸಕರ ವಿರುದ್ದವೇ ಸತ್ಯಶೋಧನೆ ಸಮಿತಿಯ ಮುಂದೆ ದೂರು ನೀಡಿದ್ದಾರೆ. ಹಾಗಾದರೆ ನಿಮ್ಮ ತನಿಖೆಯ ಹಣೆಬರಹ ಏನು’ ಎಂದು ಅವರು ಕೇಳಿದರು. 

ADVERTISEMENT

ಪ್ರಕರಣ ಮುಚ್ಚಿ ಹಾಕಲು ಪ್ರಯತ್ನ: ‘ಬಳ್ಳಾರಿಯಲ್ಲಿ ನಡೆದ ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಸರ್ಕಾರ ತರಾತುರಿಯಲ್ಲಿ ಕೆಲಸ ಮಾಡುತ್ತಿದೆ. ಕೇವಲ ಬ್ಯಾನರ್ ಕಟ್ಟುವ ವಿಚಾರಕ್ಕೆ ಬೀದಿಯಲ್ಲಿ ಗುಂಡು ಹಾರಿಸ್ತಾರಾ? ಮರಣೋತ್ತರ ಪರೀಕ್ಷೆ ನಡೆದ ನಂತರ ಕೊಲೆಯಾದ ಕಾರ್ಯಕರ್ತನ ಮೃತದೇಹವನ್ನು ತರಾತುರಿಯಲ್ಲಿ ಸುಟ್ಟು ಹಾಕಿದ್ದು ಯಾಕೆ? ಕುಟುಂಬದವರಿಗೆ ಅಂತಿಮ ವಿಧಿ ವಿಧಾನ ನಡೆಸುವುದಕ್ಕೆ ಅವಕಾಶವನ್ನೂ ನೀಡಿಲ್ಲ ಏಕೆ? ಇದಕ್ಕೆಲ್ಲಾ ಸರ್ಕಾರ ಉತ್ತರ ಕೊಡಬೇಕು’ ಎಂದು ಅವರು ಆಗ್ರಹಿಸಿದರು. 

‍‘ಸಚಿವ ಪ್ರಿಯಾಂಕ್‌ ಖರ್ಗೆ ಮೊದಲು ಗುರುಮಿಠಕಲ್ ಕ್ಷೇತ್ರಕ್ಕೆ ನಿಮ್ಮ ಹಾಗೂ ನಿಮ್ಮ ತಂದೆಯ ಕೊಡುಗೆ ಏನು ಅಂತ ಹೇಳಿ. ಕಲ್ಯಾಣ ಕರ್ನಾಟಕ ಬಿಡಿ, ನಿಮ್ಮ ಕ್ಷೇತ್ರ ನೋಡಿದರೆ ನೀವು ಮಾಡಿದ ಅಭಿವೃದ್ಧಿ ಏನು, ಎಂತಹದ್ದು ಎಂಬುದು ಗೊತ್ತಾಗುತ್ತದೆ’ ಎಂದು ವ್ಯಂಗ್ಯವಾಡಿದರು. 

‘ನಕಲಿ ಶಾಮನ ಮಾತು ನಿಲ್ಲಿಸಿ ಗೃಹ ಸಚಿವರೇ... ಮೊದಲು ಬಳ್ಳಾರಿ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಿ. ಯಾರ ಯಾರ ತಲೆ ಉರುಳುತ್ತದೆ ಎನ್ನುವುದು ನಿಮಗೆ ಗೊತ್ತಾಗುತ್ತದೆ’ ಎಂದರು. 

‘ಬಳ್ಳಾರಿ ಬಿಮ್ಸ್ ನಿರ್ದೇಶಕರೇ ಹೇಳುವಂತೆ ಡಾ. ಯೋಗೀಶ್ ಎಂಬವರು ಮೊದಲು ಮರಣೋತ್ತರ ಪರೀಕ್ಷೆ ಶುರು ಮಾಡಿದರು. ಅವರ ಪರೀಕ್ಷೆ ತಡವಾಯಿತು ಎಂದು ಇನ್ನೊಬ್ಬ ವೈದ್ಯ ಡಾ. ಚೇತನ್ ಎನ್ನುವವರನ್ನು ಕರೆಸಿದ್ದಾರೆ. ಆ ವೈದ್ಯರನ್ನು ಕರೆಸಿದ್ದು ಯಾಕೆ? ಯಾರ ಆದೇಶದಂತೆ ಅವರನ್ನು ಕರೆಸಲಾಯಿತು? ಇತಿಹಾಸದಲ್ಲಿ ಮೊದಲ ಬಾರಿಗೆ ಮರಣೋತ್ತರ ಪರೀಕ್ಷೆಗೆ ಇಬ್ಬರು ವೈದ್ಯರನ್ನು ಕರೆಸಿ ಮಾಡಿಸಿದ್ದಾರೆ‘ ಎಂದು ಅವರು ತಿಳಿಸಿದರು. 

ನನ್ನ ಮತ್ತು ಜನಾರ್ದನ ರೆಡ್ಡಿ ನಡುವೆ ನಡೆದ ಗಲಾಟೆ ಹಳೇ ಕಥೆ. ಅದನ್ನು ಈಗ ಮುಂದೆ ತಂದು ಅವರು ಏನು ಮಾಡಲು ಸಾಧ್ಯ? ನಾನು ಯಾವುದೋ ರಾಗದ್ವೇಷ ಇಲ್ಲದೇ ಮಾಧ್ಯಮಗಳ ಮುಂದೆ ಸತ್ಯ ಹೇಳಿದ್ದೇನೆ. ಕಾಂಗ್ರೆಸ್ ಜತೆ ಕೂಡ ಸರ್ಕಾರ ಮಾಡಿದ್ದೇನೆ. ಆಗ ಬಂಡೆ ತರ ನಿಂತಿದ್ದು ಇವರೇ ತಾನೇ. ಎಲ್ಲರೂ ಜೋಡೆತ್ತು ಎಂದರು. ಆಮೇಲೆ ಆಗಿದ್ದು ಏನು? ಬೆನ್ನಿಗೆ ಚೂರಿ ಹಾಕಿ ವಿಶ್ವಾಸ ದ್ರೋಹ ಎಸಗಿದರು. 
ಎಚ್‌.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ