ADVERTISEMENT

ನದಿಗಳ ಉಳಿವಿಗೆ ಕುಂಭಮೇಳ ಸಹಕಾರಿ: ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಮತ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2022, 19:21 IST
Last Updated 15 ಅಕ್ಟೋಬರ್ 2022, 19:21 IST
ಕೆ.ಆರ್‌.ಪೇಟೆ ತಾಲ್ಲೂಕು ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದ ಅಂಗವಾಗಿ ನಡೆದ ಧಾರ್ಮಿಕ ಸಭೆಯನ್ನು ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಶಿವಾನಂದ ಶಿವಯೋಗಿ ಸ್ವಾಮೀಜಿ, ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಕೆ.ಸಿ.ನಾರಾಯಣಗೌಡ, ಎಸ್‌.ಅಶ್ವತಿ ಇದ್ದರು
ಕೆ.ಆರ್‌.ಪೇಟೆ ತಾಲ್ಲೂಕು ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದ ಅಂಗವಾಗಿ ನಡೆದ ಧಾರ್ಮಿಕ ಸಭೆಯನ್ನು ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಶಿವಾನಂದ ಶಿವಯೋಗಿ ಸ್ವಾಮೀಜಿ, ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಕೆ.ಸಿ.ನಾರಾಯಣಗೌಡ, ಎಸ್‌.ಅಶ್ವತಿ ಇದ್ದರು   

ತ್ರಿವೇಣಿ ಸಂಗಮ (ಮಂಡ್ಯ ಜಿಲ್ಲೆ): ‘ಆಧುನಿಕ ಕಾಲಘಟ್ಟದಲ್ಲಿ ನದಿಗಳ ಉಳಿವು ಮತ್ತು ಸಂರಕ್ಷಣೆಗೆ ಕುಂಭಮೇಳ ಆಚರಣೆಗಳು ಸಹಕಾರಿಯಾಗುತ್ತವೆ’ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಪ್ರತಿಪಾದಿಸಿದರು.

ಕೆ.ಆರ್‌.ಪೇಟೆ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದ 3ನೇ ದಿನ ಶನಿವಾರ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿ, ‘ಉತ್ತರ ಭಾರತಕ್ಕಷ್ಟೇ ಸೀಮಿತವಾಗಿದ್ದ ಕುಂಭಮೇಳ ದಕ್ಷಿಣ ಭಾರತದಲ್ಲೂ ನಡೆಯುತ್ತಿರುವುದು ನದಿ, ಜಲಮೂಲಗಳ ರಕ್ಷಣೆಗೆ
ಮಹತ್ವಪೂರ್ಣವಾದ ನಡೆ. ನದಿಗಳನ್ನು ರಕ್ಷಿಸದಿದ್ದರೆ ಭವಿಷ್ಯದಲ್ಲಿ ಅ‍ಪಾರ ತೊಂದರೆ ಅನುಭವಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

‘ಮೂರು ಜೀವಂತ ನದಿಗಳು ಕೂಡುವ ಸ್ಥಳ ಅತ್ಯಂತ ಪವಿತ್ರ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪರಿಶ್ರಮದಿಂದಾಗಿ ಗಂಗಾನದಿ ಸ್ವಚ್ಛತೆಗೆ ಹೊಸ ಯೋಜನೆ ರೂಪಿಸಲಾಗಿದೆ. ಅಂತೆಯೇ ನಮ್ಮ ರಾಜ್ಯ ಸರ್ಕಾರ ಕೂಡ ತ್ರಿವೇಣಿ ಸಂಗಮವನ್ನು ಅಭಿವೃದ್ಧಿಗೊಳಿಸಿ ಪಾವಿತ್ರ್ಯವನ್ನು ಹೆಚ್ಚಿಸಬೇಕು’ ಎಂದು ಹೇಳಿದರು.

ADVERTISEMENT

ಬಾಳೆಹೊನ್ನೂರು ತೆಂಡೇಕೆರೆ ಶಾಖಾಮಠದ ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಆದಿಚುಂಚನಗಿರಿ ಪೀಠದ
ಡಾ.ನಿರ್ಮಲಾನಂದ ನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಬೇಬಿ ಮಠದ
ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಕನಕ ಗುರುಪೀಠದ ಶಿವಾನಂದ ಪುರಿ ಅವರು ಇದ್ದರು.

ತ್ರಿವೇಣಿ ಸಂಗಮಕ್ಕೆ ಯೋಗಿ ಆದಿತ್ಯನಾಥ ಇಂದು

ಕುಂಭಮೇಳದ ಸಮಾರೋಪ ಸಮಾರಂಭ ಭಾನುವಾರ (ಅ.16) ನಡೆಯಲಿದ್ದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಭಾಗವಹಿಸಲಿದ್ದಾರೆ. ತ್ರಿವೇಣಿ ಸಂಗಮದಲ್ಲಿ ನಡೆಯುವ ಪುಣ್ಯಸ್ನಾನದಲ್ಲೂ ಅವರು ಪಾಲ್ಗೊಳ್ಳಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ಬಿಜೆಪಿ ಮುಖಂಡ ಬಿ.ಎಸ್‌.ಯಡಿಯೂರಪ್ಪ ಅವರು ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.